ಆಪರೇಷನ್ ಥಿಯೇಟರ್‌ನಲ್ಲಿ ವಿವಾಹಪೂರ್ವ ಫೋಟೋ ಶೂಟ್:ವೈದ್ಯ ಸೇವೆಯಿಂದ ವಜಾ

Views: 141
ಚಿತ್ರದುರ್ಗದ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ವೈದ್ಯರೋರ್ವರು ವಿವಾಹ ಪೂರ್ವ ಫೋಟೋ ಶೂಟ್ ಮಾಡಿದ್ದು, ಈ ಕುರಿತ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ವ್ಯಾಪಕ ಟೀಕೆ ವ್ಯಕ್ತವಾಗಿದ್ದವು, ಇದೀಗ ಫೋಟೋ ಶೂಟ್ ಮಾಡಿದ ವೈದ್ಯರನ್ನು ಸೇವೆಯಿಂದ ವಜಾಗೊಳಿಸಿ ಆರೋಗ್ಯ ಸಚಿವರು ಆದೇಶವನ್ನು ಹೊರಡಿಸಿದ್ದಾರೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಈ ಕುರಿತು ಪ್ರತಿಕ್ರಿಯೆಯನ್ನು ನೀಡಿದ್ದು, ಚಿತ್ರದುರ್ಗದ ಭರಮಸಾಗರ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಪ್ರಿ ವೆಡ್ಡಿಂಗ್ ಶೋಟ್ ನಡೆಸಿದ ವೈದ್ಯರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಿರುವುದು ಜನರ ಆರೋಗ್ಯ ಸೇವೆಗೆ ಹೊರತು ವೈಯಕ್ತಿಕ ಕೆಲಸಗಳಿಗಲ್ಲ. ವೈದ್ಯರಿಂದ ಇಂಥಹ ಅಶಿಸ್ತುಗಳನ್ನು ನಾನು ಸಹಿಸುವುದಿಲ್ಲ. ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲ ಗುತ್ತಿಗೆ ನೌಕರರು ಸೇರಿದಂತೆ ವೈದ್ಯರು, ಸಿಬ್ಬಂದಿ ವರ್ಗದವರು ಸರ್ಕಾರಿ ಸೇವಾ ನಿಯಮಾವಳಿಗಳ ಅನ್ವಯ ಕರ್ತವ್ಯ ನಿರ್ವಹಿಸಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಈ ರೀತಿಯ ದುರುಪಯೋಗಗಳು ಆಗದಂತೆ ಎಚ್ಚರಿಕೆ ವಹಿಸಲು ಸಂಬಂಧಪಟ್ಟ ವೈದ್ಯರು ಹಾಗೂ ಎಲ್ಲಾ ಸಿಬ್ಬಂದಿಗಳಿಗೆ ಈಗಾಗಲೇ ಸೂಚಿಸಿದ್ದೇನೆ. ಸರ್ಕಾರಿ ಆಸ್ಪತ್ರೆಗಳಿಗೆ ಸರ್ಕಾರ ಒದಗಿಸಿರುವ ಸೌಕರ್ಯಗಳು ಜನಸಾಮಾನ್ಯರ ಆರೋಗ್ಯ ರಕ್ಷಣೆಗೆ ಎಂಬುದನ್ನು ಅರಿತು ಕರ್ತವ್ಯ ನಿರ್ವಹಿಸುವತ್ತ ಎಲ್ಲರೂ ಗಮನಹರಿಸಬೇಕು ಎಂದು ಹೇಳಿದ್ದಾರೆ.
ಭರಮಸಾಗರ ಸರ್ಕಾರಿ ಆಸ್ಪತ್ರೆಯ ವೈದ್ಯ ಅಭಿಷೇಕ್ ಇತ್ತೀಚೆಗೆ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ವಿವಾಹಪೂರ್ವ ಫೋಟೋ ಶೂಟ್ ಮಾಡಿಸಿಕೊಂಡಿದ್ದರು. ಡಾ.ಅಭಿಷೇಕ್ ಗುತ್ತಿಗೆ ಅಧಾರದಲ್ಲಿ ಕೆಲಸ ಮಾಡುತ್ತಿದ್ದು, ವಿವಾಹಪೂರ್ವ ಫೋಟೋ ಶೂಟ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು. ವೈದ್ಯರ ನಡೆಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಒಂದು ಫೋಟೋದಲ್ಲಿ ಅಭಿಷೇಕ್ ರೋಗಿಯೊಬ್ಬರಿಗೆ ಶಸ್ತ್ರಚಿಕಿತ್ಸೆ ನೀಡುತ್ತಿರುವ ರೀತಿ ತೋರಿಸುತ್ತದೆ, ಆದರೆ ವಧು ಮುಂದೆ ನಿಂತು ಅವರಿಗೆ ಸಹಾಯ ಮಾಡುತ್ತಿದ್ದಾರೆ. ಅಂತಿಮವಾಗಿ ಆಪರೇಷನ್ ಮುಗಿಯಿತು ಎಂದ ಬಳಿಕ ರೋಗಿ ಎದ್ದು ಕುಳಿತುಕೊಳ್ಳುತ್ತಾನೆ. ಈ ಎಲ್ಲಾ ದೃಶ್ಯಗಳನ್ನು ವೀಡಿಯೋದಲ್ಲಿ ಸೆರೆಯಾಗಿದೆ.