ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಎ.2ಕ್ಕೆ ಜಯಪ್ರಕಾಶ್ ಹೆಗ್ಡೆ,ಎ.3ಕ್ಕೆ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

Views: 36
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅವರು ಎ.2ರಂದು ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕಕುಮಾರ್ ಕೊಡವೂರು ತಿಳಿಸಿದ್ದಾರೆ.
ರಾಜ್ಯ ಕಾಂಗ್ರೆಸ್‌ನ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜಿ ಸಂಸದ ವಿನಯಕುಮಾರ್ ಸೊರಕೆ ಅವರು ಹೊಸ ಜವಾಬ್ದಾರಿ ವಹಿಸಿಕೊಂಡ ಬಳಿಕ ನಾಳೆ ರಾತ್ರಿ 8:00ಗಂಟೆಗೆ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಗೆ ಆಗಮಿಸಲಿದ್ದು, ಅವರನ್ನು ಹೆಜಮಾಡಿಯ ಟೋಲ್‌ಗೇಟ್ ಬಳಿ ಸ್ವಾಗತಿಸಿ ಉಡುಪಿಗೆ ಕರೆದುಕೊಂಡು ಬರಲಾಗುವುದು ಎಂದು ಅವರು ಹೇಳಿದ್ದಾರೆ.
ಎ.3ರಂದು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಎ.3ರಂದು ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.
ಕಡಿಯಾಳಿಯ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಿಣಿ ಅವರು, ಅಂದು ಬೆಳಿಗ್ಗೆ 10.30ಕ್ಕೆ ಬಿಜೆಪಿ ಕಚೇರಿ ಬಳಿ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಅದು ಮುಗಿದ ಬಳಿಕ ಕೋಟ ಅವರು ಮೆರವಣಿಗೆಯಲ್ಲಿ ತೆರಳಿ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ ಎಂದರು.
ಲೋಕಸಭಾ ಚುನಾವಣೆಗೆ ಪೂರಕವಾಗಿ ಬಿಜೆಪಿ ಉಡುಪಿ ಜಿಲ್ಲಾ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕರ್ತರ ಸಮಾವೇಶಗಳನ್ನು ಹಮ್ಮಿಕೊಂಡಿದೆ. ಕುಂದಾಪುರ ಸಮಾವೇಶವು ಮಾ.29ರಂದು ಸಂಜೆ 4ಗಂಟೆಗೆ ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ, ಕಾಪು ಸಮಾವೇಶ ಮಾ.30ರ ಸಂಜೆ 4ಗಂಟೆಗೆ ಹೊಟೇಲ್ ಕೆಒನ್ ಹಾಲ್‌ನಲ್ಲಿ, ಉಡುಪಿ ಸಮಾವೇಶ ಎ.3ರಂದು 10:30ಕ್ಕೆ ಹಾಗೂ ಕಾರ್ಕಳ ಸಮಾವೇಶ ಎ.5ರ ಬೆಳಿಗ್ಗೆ 10:30ಕ್ಕೆ ಕಾರ್ಕಳ ಮಂಜುನಾಥ ಪೈ ಸಭಾಂಗಣದಲ್ಲಿ ನಡೆಯಲಿದೆ ಎಂದರು.