ಉಡುಪಿ: ಮಹಿಳೆಯನ್ನು ಮರಕ್ಕೆ ಕಟ್ಟಿ ಅಮಾನುಷ ಹಲ್ಲೆ: ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ

Views: 202
ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿ ಮೀನು ಕದ್ದಿದ್ದಾರೆಂದು ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ವೀಡಿಯೋ ಕಂಡು ದಿಗ್ಧಮೆಯಾಯಿತು. ಕಾರಣವೇನೇ ಇರಲಿ-ಒಬ್ಬ ಮಹಿಳೆಯನ್ನು ಈ ರೀತಿ ಕಟ್ಟಿ ಹಾಕಿ ಹಲ್ಲೆ ಮಾಡುವುದು ‘ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು. ಇಂತಹ ಅನಾಗರಿಕ ವರ್ತನೆ ಕರ್ನಾಟಕದಂತಹ ಸುಸಂಸ್ಕೃತ ನಾಡಿಗೆ ತಕ್ಕುದಾದುದ್ದಲ್ಲ. ಕಾನೂನಿನಡಿಯಲ್ಲಿ ಶಿಕ್ಷಿಸಲು ಅವಕಾಶ ಇರುವಾಗ ಸಾರ್ವಜನಿಕರುಕಾನೂನು ಕೈಗೆತ್ತಿಕೊಳ್ಳುವುದನ್ನು ಸರಕಾರ ಸಹಿಸುವುದಿಲ್ಲ. ಘಟನೆ ಕುರಿತು ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದರು.
ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ.
ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಘಟನೆ. ಮಾಹಿತಿ ಬಂದ ತಕ್ಷಣ ಅಧಿಕಾರಿಗಳ ಜೊತೆ ಮಾತನಾಡಿ ಕಠಿಣ ಕ್ರಮಕ್ಕೆ ಸೂಚಿಸಿದ್ದೇನೆ. ಈಗಾಗಲೇ ಸುಂದರ್, ಶಿಲ್ಪಾ, ಲಕ್ಷ್ಮೀ ಮೂವರನ್ನು ಬಂಧಿಸಲಾಗಿದೆ. ಪ್ರಕರಣದ ಹಿಂದೆ ಇನ್ನೂ ಯಾರಿದ್ದಾರೆ ಎಂದು ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದೇನೆ ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.