ಐದು ವರ್ಷದ ಬಾಲಕಿ ಅತ್ಯಾಚಾರವೆಸಗಿ ಕೊಲೆ ಪ್ರಕರಣ: ಆರೋಪಿ ಮೃತದೇಹ ದಹನ ಮಾಡದೆ ಸಮಾಧಿ

Views: 129
ಕನ್ನಡ ಕರಾವಳಿ ಸುದ್ದಿ: ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿ ರಿತೇಶ್ ಮೃತದೇಹವನ್ನು ಮುಂದಿನ ತನಿಖೆಗೆ ಲಭ್ಯವಾಗುವಂತೆ ಮಾಡುವ ಸಲುವಾಗಿ ದಹನ ಮಾಡದೆ ಸಮಾಧಿ ಮಾಡಲಾಗುವುದು ಎಂದು ಹೈಕೋರ್ಟ್ ಗೆ ಸರ್ಕಾರ ತಿಳಿಸಿದೆ.
ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಪ್ರಕರಣದ ಆರೋಪಿಯು ಪೊಲೀಸ್ ಎನ್ಕೌಂಟರ್ನಲ್ಲಿ ಸಾವನ್ನಪ್ಪಿದ್ದಾನೆ. ಇಡೀ ಪ್ರಕರಣಕ್ಕೆ ಆರೋಪಿಯ ಮೃತದೇಹವು ಪ್ರಮುಖ ಸಾಕ್ಷ್ಯವಾಗಿದ್ದು, ಮೃತದೇಹವನ್ನು ದಹನ ಮಾಡದಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಮಾನವ ಹಕ್ಕುಗಳ ಪರ ಹೋರಾಡುತ್ತಿರುವ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಸಂಘಟನೆ ಮತ್ತು ಡಾ.ಮಧು ಭೂಷಣ್ ಎಂಬುವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು.
ಅರ್ಜಿ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಈ ರೀತಿಯ ಪ್ರಕರಣಗಳಲ್ಲಿ ಮೃತದೇಹವನ್ನು ದಹನ ಮಾಡುವುದಿಲ್ಲ. ಆದರೆ, ಮುಂದಿನ ತನಿಖೆಗೆ ನೆರವಾಗಬೇಕು ಎಂಬ ಕಾರಣದಿಂದ ಸಮಾಧಿ ಮಾಡಲಾಗುವುದು. ಆಗ ತನಿಖೆಗೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ತಿಳಿಸಿದರು.