ರಾಜಕೀಯ

ಕಾಂಗ್ರೆಸ್‌ ನ ಮತ್ತೊಂದು ಪಟ್ಟಿ ಪ್ರಕಟ; ರಕ್ಷಾ ರಾಮಯ್ಯ, ತುಕಾರಾಂ, ಸುನೀಲ್‌ ಬೋಸ್‌ ಕಣಕ್ಕೆ, ಕೋಲಾರ ಟಿಕೆಟ್ ಕಗ್ಗಂಟು..!  

Views: 23

ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ 9ನೇ ಪಟ್ಟಿ ಬಿಡುಗಡೆ ಮಾಡಿದ್ದು, ರಕ್ಷಾ ರಾಮಯ್ಯ, ತುಕಾರಾಂ, ಸುನೀಲ್‌ ಬೋಸ್‌ ಗೆ ಟಿಕೆಟ್ ನೀಡಲಾಗಿದೆ.

ಶುಕ್ರವಾರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಿಂದ ಅಭ್ಯರ್ಥಿಗಳ 9ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕರ್ನಾಟಕದ ಮೂರು ಹಾಗೂ ರಾಜಸ್ಥಾನದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಿಸಲಾಗಿದೆ. ರಾಜ್ಯದಲ್ಲಿ 24 ಕ್ಷೇತ್ರಗಳಿಗೆ ಈಗಾಗಲೇ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಇದೀಗ ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಯುವ ಕಾಂಗ್ರೆಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ, ಚಾಮರಾಜನಗರ ಕ್ಷೇತ್ರದಲ್ಲಿ ಸಚಿವ ಎಚ್.ಸಿ. ಮಹದೇವಪ್ಪ ಪುತ್ರ ಸುನೀಲ್ ಬೋಸ್ ಹಾಗೂ ಬಳ್ಳಾರಿಯಲ್ಲಿ ಸಂಡೂರು ಶಾಸಕ ಇ.ತುಕಾರಾಂ ಅವರಿಗೆ ಟಿಕೆಟ್‌ ನೀಡಲಾಗಿದೆ.‌

ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಎಂ.ಆರ್‌.ಸೀತಾರಾಂ ಅವರ ಪುತ್ರ ರಕ್ಷಾ ರಾಮಯ್ಯಗೆ ಟಿಕೆಟ್‌ ನೀಡಲು ವಿರೋಧ ವ್ಯಕ್ತವಾಗಿತ್ತು. ಆದರೂ, ಅಂತಿಮವಾಗಿ ಪಕ್ಷ ಅವರಿಗೇ ಮಣೆ ಹಾಕಿದೆ. ಇನ್ನು ಚಾಮರಾಜನಗರದಲ್ಲಿ ಪುತ್ರ ಸುನೀಲ್‌ ಬೋಸ್‌ಗೆ ಟಿಕೆಟ್ ಕೊಡಿಸುವಲ್ಲಿ ಸಚಿವ ಎಚ್.ಸಿ ಮಹದೇವಪ್ಪ ಯಶಸ್ವಿಯಾಗಿದ್ದಾರೆ. ಹಾಗೆಯೇ ಬಳ್ಳಾರಿಯಲ್ಲಿ ಆರೇಳು ಮಂದಿ ಟಿಕೆಟ್‌ ಆಕಾಂಕ್ಷಿಗಳಿದ್ದರು. ಟಿಕೆಟ್‌ ರೇಸ್‌ನಲ್ಲಿ ಅಂತಿಮವಾಗಿ ಸಂಡೂರಿನ ನಾಲ್ಕು ಬಾರಿಯ ಶಾಸಕ ಈ.ತುಕಾರಾಂ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.

ಕೋಲಾರ ಟಿಕೆಟ್ ಕಗ್ಗಂಟು..?

ಬಣ ರಾಜಕೀಯದಿಂದ ಭಾರಿ ಸುದ್ದಿಗೆ ಗ್ರಾಸವಾಗಿರುವ ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಘೋಷಣೆ ಇನ್ನೂ ಬಾಕಿ ಉಳಿದಿದೆ. ಕೋಲಾರದಲ್ಲಿ ಕೆ.ಎಚ್.‌ ಮುನಿಯಪ್ಪ ಅವರ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ನೀಡುವ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ಒಲವು ತೋರಿದೆ ಎಂಬ ಮಾತುಗಳು ಕೇಳಿಬಂದಿದ್ದರಿಂದ ಮಾಜಿ ಸಚಿವ ರಮೇಶ್ ಕುಮಾರ್ ಬಣ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಮುನಿಯಪ್ಪ ಕುಟುಂಬಕ್ಕೆ ಟಿಕೆಟ್‌ ನೀಡಿದರೆ ರಾಜೀನಾಮೆ ನೀಡುವುದಾಗಿ ಕೋಲಾರ ಜಿಲ್ಲೆಯ ಕಾಂಗ್ರೆಸ್‌ ಶಾಸಕರು ಎಚ್ಚರಿಕೆ ನೀಡಿದ್ದರು.

ಈ ಕ್ಷೇತ್ರದ ಟಿಕೆಟ್‌ ಅಂತಿಮ ಮಾಡುವುದು ಹೈಕಮಾಂಡ್‌ಗೆ ತಲೆನೋವಾಗಿ ಪರಿಣಮಿಸಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದ್ದು, ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ ಎಂದು ಎರಡೂ ಬಣದ ನಾಯಕರು ಒಪ್ಪಿದ್ದಾರೆ.

Related Articles

Back to top button