ಕುಂದಾಪುರ: ಹರ್ಕೂರಿನಲ್ಲಿ ಮಲಗಿದ್ದವನ ತಲೆಗೆ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ ಮಾಡಿದ ವ್ಯಕ್ತಿಗೆ ಜೀವಾವಧಿ ಶಿಕ್ಷೆ
Views: 157
ಕನ್ನಡ ಕರಾವಳಿ ಸುದ್ದಿ: ಕುಂದಾಪುರ ತಾಲೂಕಿನ ಹರ್ಕೂರು ಗ್ರಾಮದಲ್ಲಿ 2023ರಲ್ಲಿ ನಡೆದಿದ್ದ ಮೇಸ್ತ್ರಿ ಸಂಗಮೇಶ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾನ್ಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿ ರಾಜು ಎಂಬಾತನಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ಏನಿದು ಪ್ರಕರಣ?
ದಿನಾಂಕ 14-05-2023ರಂದು ರಾತ್ರಿ ಸಂಬಳದ ಹಣದ ವಿಚಾರವಾಗಿ ರಾಜು ಹಾಗೂ ಸಂಗಮೇಶ ಅವರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಆಕ್ರೋಶಗೊಂಡ ರಾಜು, “ನಿನ್ನನ್ನು ಕೊಲ್ಲದೆ ಬಿಡುವುದಿಲ್ಲ” ಎಂದು ಬೆದರಿಕೆಯೊಡ್ಡಿ, ಸ್ಥಳದಲ್ಲಿದ್ದ ಕೆಂಪು ಕಲ್ಲಿನಿಂದ ಮಲಗಿದ್ದ ಸಂಗಮೇಶ ಅವರ ತಲೆಗೆ ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿದ್ದನು.
ಈ ಕುರಿತು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಅಂದಿನ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರಾದ ಸಂತೋಷ್ ಕಾಯ್ಕಿಣಿ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಅಭಿಯೋಜಕಿ ಶ್ರೀಮತಿ ಇಂದಿರಾ ನಾಯಕ್ ಅವರು ವಾದ ಮಂಡಿಸಿದ್ದರು.
ಪ್ರಕರಣದ ಸಮಗ್ರ ವಿಚಾರಣೆ ನಡೆಸಿದ ಮಾನ್ಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಅಬ್ದುಲ್ ರಹೀಂ ಹುಸೇನ್ ಶೇಖ್ ಅವರು ಜುಲೈ 29 ರಂದು ಅಂತಿಮ ತೀರ್ಪು ಪ್ರಕಟಿಸಿದ್ದಾರೆ.






