ಕೊಲ್ಲೂರು ಮೂಕಾಂಬಿಕಾ ದೇವಾಲಯದ ಪಕ್ಕದಲ್ಲೇ ರಾಷ್ಟ್ರೀಯ ಹೆದ್ದಾರಿ ಪ್ರಶ್ನಿಸಿ ಹೈಕೋರ್ಟ್ಗೆ

Views: 85
ಬೆಂಗಳೂರು, ಕರ್ನಾಟಕದ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾಗಿರುವ ಕೊಲ್ಲೂರು ಮೂಕಾಂಬಿಕಾ ದೇವಾಲಯದ ಪಕ್ಕದಲ್ಲೇ ರಾಷ್ಟ್ರೀಯ ಹೆದ್ದಾರಿಗೆ ಭೂಸ್ವಾಧೀನ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ದೇವಾಲಯದ ಗೋಡೆಯ 3 ಅಡಿ ಪಕ್ಕದಲ್ಲೇ ಹೆದ್ದಾರಿಗೆ ಭೂಸ್ವಾಧೀನಕ್ಕೆ ಸೂಚಿಸಲಾಗಿದೆ. ಇದನ್ನು ಪ್ರಶ್ನಿಸಿ ಕೊಲ್ಲೂರಿನ ಗುರುಪ್ರಸಾದ್ ಎಂಬುವರು ಪಿಐಎಲ್ ಸಲ್ಲಿಸಿದ್ದಾರೆ.
ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಿಜೆ ಪಿ.ಎಸ್. ದಿನೇಶ್ ಕುಮಾರ್, ನ್ಯಾ. ಟಿ.ಜಿ. ಶಿವಶಂಕರೇಗೌಡರಿದ್ದ ವಿಚಾರಣೆಗೆ ಕೈಗೆತ್ತಿಕೊಂಡಿದ್ದು, ಸದ್ಯ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಿದೆ.
ಯೋಜನೆಯೆ ಪ್ರಕಾರ ಕಾಮಗಾರಿ ನಡೆದರೆ, ದೇವಾಲಯದ ಗೋಡೆಯ 3 ಅಡಿ ಪಕ್ಕದಲ್ಲೇ ಹೆದ್ದಾರಿ ನಿರ್ಮಾಣವಾಗಲಿದೆ. ಹೆದ್ದಾರಿಯಲ್ಲಿ ಪ್ರತಿದಿನ ಅಂದಾಜು ಹದಿನೈದು ಸಾವಿರ ವಾಹನಗಳು ಹಾದುಹೋಗಲಿವೆ. ಇದರಿಂದ ಸಾವಿರಾರು ವರ್ಷಗಳ ಹಳೆಯ ದೇಗುಲಕ್ಕೆ ಅಪಾಯವಿದೆ ಎಂದು ಅರ್ಜಿದಾರರ ಪರ ವಕೀಲ ವೆಂಕಟೇಶ ದಳವಾಯಿ ವಾದ ಮಂಡನೆ ಮಾಡಿದೆ.
ಅರ್ಜಿದಾರರ ಪರ ವಾದವನ್ನು ಆಲಿಸಿದ ನ್ಯಾಯಪೀಠ, ಹೆದ್ದಾರಿ ಪ್ರಾಧಿಕಾರಕ್ಕೆ ನೋಟಿಸ್ ನೀಡಿ ವಿವರಣೆ ಕೇಳಿದೆ. ಜತೆಗೆ, ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶ ನೀಡಿದೆ.