ಜನಮನ

ಖಾಸಗಿ ಶಾಲೆಗಳಲ್ಲಿ ಇನ್ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ… ಸುತ್ತೋಲೆಯಲ್ಲಿ ಏನಿದೆ?

Views: 72

ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬರ್ಥದ ಸುತ್ತೋಲೆಯನ್ನು ರಾಜ್ಯ ಸರ್ಕಾರ ಫೆಬ್ರವರಿ 16ರಂದು ಹೊರಡಿಸಿರುವುದು ಇದೀಗ ತಿಳಿದುಬಂದಿದೆ. ರಾಜ್ಯ ಸರ್ಕಾರದ ಈ ನಡೆ ಕೂಡ ವಿರೋಧಕ್ಕೆ ಗುರಿಯಾಗುವ ಸಾಧ್ಯತೆಗಳಿವೆ.

ರಾಜ್ಯ ಸರ್ಕಾರದ ಸುತ್ತೋಲೆಯಲ್ಲಿ ಏನಿದೆ?

ರಾಷ್ಟ್ರ ಕವಿ, ಜ್ಞಾನಪೀಠ ಪುರಸ್ಕೃತ ಡಾ. ಕುವೆಂಪುರವರ ‘ಜಯ ಭಾರತ ಜನನಿಯ ತನುಜಾತೆ’ ಕವನವನ್ನು ‘ನಾಡಗೀತೆ’ಯಾಗಿ ಘೋಷಿಸುವ ಕುರಿತು ಹೊರಡಿಸಲಾದ ಸರ್ಕಾರದ ಆದೇಶ ಹಾಗೂ ಅದಕ್ಕೆ ಫೆಬ್ರವರಿ 1ರಂದು ಮಾಡಲಾದ ತಿದ್ದುಪಡಿ ಪ್ರಕಾರ, ‘ಎಲ್ಲಾ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು’ ಎಂಬುದರ ಬದಲಾಗಿ, ‘ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು’ ಎಂದು ತಿದ್ದಿ ಓದಿಕೊಳ್ಳತಕ್ಕದ್ದು ಎಂಬುದಾಗಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ಈ ಮೇಲಿನ ಸುತ್ತೋಲೆಯಲ್ಲಿ ‘ಎಲ್ಲಾ ಶಾಲೆಗಳಲ್ಲಿ ಕಾರ್ಯಕ್ರಮದ ಆರಂಭದಲ್ಲಿ ನಾಡಗೀತೆಯನ್ನು ಹಾಡುವುದು’ ಎಂಬುದರ ಬದಲಾಗಿ, ‘ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳಲ್ಲಿ’ ಎಂದು ಬದಲಾಯಿಸಲಾಗಿದೆ. ಹೀಗಾಗಿ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬರ್ಥ ಬರುತ್ತದೆ. ಹಾಗೆಂದು, ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡಬಾರದು ಎಂದು ಸರ್ಕಾರದ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿಲ್ಲ ಎಂಬುದೂ ಗಮನಾರ್ಹ.

ಕಳೆದ ಕೆಲವು ದಿನಗಳಿಂದ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಿಸಿ ರಾಜ್ಯ ಸರ್ಕಾರ ಒಂದಲ್ಲ ಒಂದು ಎಡವಟ್ಟು ಮಾಡಿಕೊಳ್ಳುತ್ತಿದೆ. ಇದೀಗ ನಾಡಗೀತೆ ಸಂಬಂಧಿತ ಸುತ್ತೋಲೆಯೊಂದಿಗೆ ಮತ್ತೊಂದು ಸೇರ್ಪಡೆಯಾದಂತಾಗಿದೆ. ಆರಂಭದಲ್ಲಿ ಸರ್ಕಾರಿ ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ಮಾಡಬಾರದು ಎಂದು ಸುತ್ತೋಲೆ ಕಳುಹಿಸಿದ್ದ ರಾಜ್ಯ ಸರ್ಕಾರ, ನಂತರ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಅದನ್ನು ಹಿಂಪಡೆದಿತ್ತು. ನಂತರ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಹಾಡಿನ ‘ಕೈಮುಗಿದು ಒಳಗೆ ಬಾ’ ಎಂಬ ಘೋಷಣೆಯನ್ನು ಬದಲಾಯಿಸಿ ‘ಧೈರ್ಯವಾಗಿ ಪ್ರಶ್ನಿಸಿ’ ಎಂದು ಬದಲಾಯಿಸಲು ಆದೇಶ ನೀಡಲಾಗಿತ್ತು.

 

Related Articles

Back to top button