ಪಕ್ಷ ವಿರೋಧಿ ಚಟುವಟಿಕೆ: ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ಬಿಜೆಪಿಯಿಂದ ಉಚ್ಚಾಟನೆ

Views: 55
ಕನ್ನಡ ಕರಾವಳಿ ಸುದ್ದಿ: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಯಲ್ಲಾಪುರದ ಶಾಸಕರಾದ ಶಿವರಾಮ್ ಹೆಬ್ಬಾರ್ ಹಾಗೂ ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರ ಶಾಸಕ ಎಸ್.ಟಿ. ಸೋಮಶೇಖರ್ ಅವರನ್ನು 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟಿಸಿದೆ.
ಬಿಜೆಪಿಯಲ್ಲೇ ಇದ್ದುಕೊಂಡು ಕಾಂಗ್ರೆಸ್ ಜೊತೆ ಈ ಇಬ್ಬರು ಶಾಸಕರು ಗುರುತಿಸಿಕೊಂಡಿದ್ದರು. ಹೀಗಾಗಿ ಈ ಇಬ್ಬರನ್ನು ಉಚ್ಛಾಟಿಸಿದೆ ಎಂದು ಕೇಂದ್ರ ಶಿಸ್ತು ಸಮಿತಿ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪದೇ ಪದೇ ಶಿಸ್ತು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಮಾರ್ಚ್ ತಿಂಗಳಲ್ಲಿ ಈ ಇಬ್ಬರು ಶಾಸಕರಿಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು. ಈ ಶೋಕಾಸ್ ನೊಟೀಸ್ ಸಮರ್ಪಕ ಉತ್ತರ ನೀಡದ ಕಾರಣ ಇಬ್ಬರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ.
ಈ ಇಬ್ಬರು ನಾಯಕರು ಬಹಿರಂಗವಾಗಿಯೇ ಕಾಂಗ್ರೆಸ್ ಪಕ್ಷದ ಸಭೆಗಳಲ್ಲಿ ಭಾಗಿಯಾಗಿದ್ದರು. ಅಲ್ಲದೆ ಪಕ್ಷದ ನಾಯಕತ್ವದ ವಿರುದ್ಧವೇ ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದರು. ಈ ಅಂಶಗಳನ್ನು ಕೇಂದ್ರ ಶಿಸ್ತು ಸಮಿತಿ ಗಂಭೀರವಾಗಿ ಪರಿಗಣಿಸಿ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಈ ಮೊದಲು ಪಕ್ಷ ವಿರೋಧಿ ಚಟುವಟಿಕೆ ಹಾಗೂ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಬಹಿರಂಗ ಹೇಳಿಕೆಗಳು ನೀಡಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಛಾಟಿಸಲಾಗಿತ್ತು. ಈಗ ಇಬ್ಬರು ಶಾಸಕರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಪಕ್ಷ ವಿರೋಧಿ ಚಟುವಟಿಕೆ ನಡೆಸುವವರಿಗೆ ಬಿಜೆಪಿ ಹೈ ಕಮಾಂಡ್ ಖಡಕ್ ಸಂದೇಶ ರವಾನಿಸಿದೆ.
ಈ ಹಿಂದೆ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಳಿಕ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಗೆದ್ದು ಇಬ್ಬರು ಮಂತ್ರಿಯಾಗಿದ್ದರು. ನಂತರ 2023ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು. ಆದರೆ ಇಬ್ಬರು ಶಾಸಕರು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರು ನಾಯಕರನ್ನು ಪಕ್ಷದಿಂದ ಹೊರಹಾಕಲಾಗಿದೆ.