ಪರಿಸರ ನಿಯಮಾವಳಿ ಉಲ್ಲಂಘನೆ: ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಮುಚ್ಚಲು ಆದೇಶ

Views: 69
ಪರಿಸರ ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಎರಡು ಸಕ್ಕರೆ ಕಾರ್ಖಾನೆಗಳನ್ನು ಮುಚ್ಚಲು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಆದೇಶಿಸಿದೆ ಎಂದು ತಿಳಿದು ಬಂದಿದೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಕಲಬುರಗಿ ಜಿಲ್ಲೆ ಚಿಂಚೋಳಿಯ ಸಿದ್ಧಶ್ರೀ ಸೌಹಾರ್ದ ಸಹಕಾರಿ ಸಕ್ಕರೆ ಕಾರ್ಖಾನೆ ಹಾಗೂ ವಿಷಾನಿಲ ಸೋರಿಕೆಯಿಂದ ಇಬ್ಬರು ಕಾರ್ಮಿಕರ ಸಾವಿಗೆ ಕಾರಣವಾದ ಬೀದರ್ ಜಿಲ್ಲೆ ಹುಮನಾಬಾದ್‌ನ ಪ್ರಸನ್ನ ಪ್ರಿ ಪ್ರೊಸೆಸಿಂಗ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಗಳನ್ನು ತಕ್ಷಣದಿಂದಲೇ ಮುಚ್ಚುವಂತೆ ಸೂಚಿಸಲಾಗಿದೆ.
ಕಳೆದ ವಾರ ಪರಿಸರ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಕೆಎಸ್‌ಪಿಸಿಬಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಬೆನ್ನಲ್ಲೇ ತುರ್ತು ಸಭೆ ನಡೆಸಿದ ಮಂಡಳಿ, ಸಕ್ಕರೆ ಕಾರ್ಖಾನೆಗಳನ್ನು ಮುಚ್ಚುವಂತೆ ನೋಟಿಸ್ ಜಾರಿಗೊಳಿಸಿದೆ ಎಂದು ವರದಿಗಳು ಹೇಳಿವೆ.
ಸಕ್ಕರೆ ಕಾರ್ಖಾನೆಗಳಿಗೆ ಬೀಗ ಜಡಿಯುವುದು ಮಾತ್ರವಲ್ಲದೆ, ಅವುಗಳ ನೋಂದಣಿಗೆ ಸಹಕರಿಸಿದ ಅಧಿಕಾರಿಗಳ ವಿರುದ್ದವೂ ಕ್ರಿಮಿನಲ್ ಪ್ರಕರಣ ದಾಖಲಿಸಲು ಕೆಎಸ್‌ಪಿಸಿಬಿ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಪರಿಶೀಲನೆ ನಡೆಸಿದ ವೇಳೆ ಎರಡು ಕಾರ್ಖಾನೆಗಳಲ್ಲಿ ಅವೈಜ್ಞಾನಿಕ ನಿರ್ವಹಣೆ ಸೇರಿದಂತೆ ಹಲವು ಲೋಪಗಳು ಕಂಡು ಬಂದಿವೆ ಎಂದು ಹೇಳಲಾಗಿದೆ.
ಕಲಬುರಗಿ ಜಿಲ್ಲೆ ಚಿಂಚೋಳಿಯಲ್ಲಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ಧಶ್ರೀ ಸೌಹಾರ್ದ ಸಹಕಾರಿ ಸಕ್ಕರೆ ಕಾರ್ಖಾನೆ ಮುಚ್ಚಲು ಕೆಎಸ್‌ಪಿಸಿಬಿ ಆದೇಶಿಸಿದೆ. ಮಾಲಿನ್ಯ ನಿಯಂತ್ರಣ ನಿಯಮಾವಳಿಗಳನ್ನು ಗಾಳಿಗೆ ತೂರಿ ಕಾರ್ಖಾನೆ ನಡೆಸುತ್ತಿದ್ದ ಆರೋಪ ಕೇಳಿ ಬಂದಿದೆ. ವರದಿಗಳ ಪ್ರಕಾರ, ಅನುಮತಿ ಪಡೆಯದೆ ಬಾಯ್ಲರ್ ಆರಂಭ, ಕಬ್ಬು ಅರೆಯುವಿಕೆ, ತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಾಣ ಹಂತದಲ್ಲಿದ್ದರೂ ಅನುಮತಿ ಪಡೆಯದೆ ಡಿಸ್ಟಿಲರಿ ಘಟಕ ಸ್ಥಾಪಿಸಿದ್ದು ಸೇರಿದಂತೆ ಅನೇಕ ಆರೋಪಗಳು ಈ ಕಾರ್ಖಾನೆ ವಿರುದ್ದ ಕೇಳಿ ಬಂದಿವೆ.
ಜನವರಿ 21ರಂದು ವಿಷಾನಿಲ ಸೋರಿಕೆಯಿಂದ ದುರ್ಘಟನೆ ನಡೆದಿರುವ ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಗಡ್ವಂತಿ ಗ್ರಾಮದ ಕೆಐಎಡಿಬಿ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಸನ್ನ ಪ್ರಿ ಪ್ರೊಸೆಸಿಂಗ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯನ್ನು ಮುಂದಿನ ಆದೇಶವರೆಗೆ ಸ್ಥಗಿತಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಈ ಕಾರ್ಖಾನೆ ಮುಚ್ಚಲು ಇತ್ತೀಚೆಗೆ ನಡೆದ ದುರ್ಘಟನೆ ಮತ್ತು ನಿಯಮಾವಳಿಗಳ ಉಲ್ಲಂಘನೆ ಮುಖ್ಯ ಕಾರಣ ಎನ್ನಲಾಗಿದೆ.