ಬಿಜೆಪಿ-ಜೆಡಿಎಸ್ ಒಗ್ಗಟ್ಟಿನ ಜಪ ಮಾಡಿ, ಮೈತ್ರಿ ಧರ್ಮ ಪಾಲನೆಯ ಸಂಕಲ್ಪ..!

Views: 44
ಬೆಂಗಳೂರು: ನಗರದಲ್ಲಿ ಇಂದು ನಡೆದ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ಲೋಕಸಭೆ ಚುನಾವಣೆ ಸಮನ್ವಯ ಸಮಿತಿ ಸಭೆಯನ್ನು ಮಾಜಿ ಪ್ರಧಾನಮಂತ್ರಿ ಹೆಚ್.ಡಿ ದೇವೇಗೌಡರವರು ಉದ್ಘಾಟಿಸಿದರು. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ,ಹೆಚ್.ಡಿ ಕುಮಾರಸ್ವಾಮಿ, ಜೆಡಿಎಸ್‌ನ ಜಿ.ಟಿ ದೇವೇಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತಿತರರು ಭಾಗವಹಿಸಿದ್ದರು.
ಬೆಂಗಳೂರು, ಬಿಜೆಪಿ-ಜೆಡಿಎಸ್ ರಾಜ್ಯಮಟ್ಟದ ಸಮನ್ವಯ ಸಮಿತಿಯ ಮೊದಲ ಸಭೆ ಇಂದು ನಡೆದಿದ್ದು, ಎರಡೂ ಪಕ್ಷದ ನಾಯಕರುಗಳು ಒಗ್ಗಟ್ಟಿನ ಜಪ ಮಾಡಿ ಮೈತ್ರಿ ಧರ್ಮ ಪಾಲನೆಯ ಸಂಕಲ್ಪ ತೊಟ್ಟರು. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಪರಸ್ಪರ ಸಮನ್ವಯತೆಯಿಂದ ಮೈತ್ರಿಕೂಟದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವ ನಿರ್ಧಾರಕ್ಕೆ ಬಂದಿವೆ.
ಬಿಜೆಪಿ-ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡ ನಂತರ ಇದೇ ಮೊದಲ ಬಾರಿಗೆ ಎರಡು ಪಕ್ಷಗಳ ನಾಯಕರ ರಾಜ್ಯಮಟ್ಟದ ಸಮನ್ವಯತೆ ಸಮಿತಿ ಸಭೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿಂದು ನಡೆದಿದ್ದು, ಈ ಸಭೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಎರಡು ಪಕ್ಷಗಳ ಅಭ್ಯರ್ಥಿಗಳ ಗೆಲುವಿನ ಕಾರ್ಯತಂತ್ರ, ಒಗ್ಗೂಡಿ ಪ್ರಚಾರ ಮಾಡುವುದು, ಉಭಯ ಪಕ್ಷಗಳ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಹೊಂದಾಣಿಕೆ ಕಾಯ್ದುಕೊಂಡು ಅಭ್ಯರ್ಥಿಗಳ ಗೆಲುವಿಗೆ ಕೆಲಸ ಮಾಡುವ ಬಗ್ಗೆ ಸಮಗ್ರ ಚರ್ಚೆ ನಡೆಯಿತು.
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಎರಡೂ ಪಕ್ಷಗಳ ನಾಯಕರು, ಮುಖಂಡರು, ಕಾರ್ಯಕರ್ತರುಗಳು ಒಗ್ಗೂಡಿ ಕೆಲಸ ಮಾಡುವ ಬಗ್ಗೆಯೂ ತೀರ್ಮಾನಗಳನ್ನು ಕೈಗೊಳ್ಳಲಾಗಿದ್ದು, ಯಾವುದೇ ಕ್ಷೇತ್ರದಲ್ಲಿ ಎರಡು ಪಕ್ಷಗಳ ನಡುವೆ ಯಾವುದೇ ರೀತಿಯ ಗೊಂದಲ, ಭಿನ್ನಾಭಿಪ್ರಾಯಕ್ಕೆ ಎಡೆಯಾಗದಂತೆ ಅಭ್ಯರ್ಥಿಗಳ ಪರ ಕೆಲಸ ಮಾಡುವ ಬಗ್ಗೆಯೂ ಈ ಸಭೆಯಲ್ಲಿ ಸುದೀರ್ಘ ಚರ್ಚೆಗಳು ನಡೆದವು.
ಈ ಲೋಕಸಭಾ ಚುನಾವಣೆ ಮೈತ್ರಿಕೂಟಕ್ಕೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ತಳಮಟ್ಟದಲ್ಲಿ ಕಾರ್ಯಕರ್ತರು, ಮುಖಂಡರು ಒಗ್ಗೂಡಿ ಕೆಲಸ ಮಾಡುವ ಮೂಲಕ ಎಲ್ಲಾ ಕ್ಷೇತ್ರಗಳಲ್ಲೂ ಮೈತ್ರಿಕೂಟದ ಅಭ್ಯರ್ಥಿಗಳು ಜಯಭೇರಿ ಬಾರಿಸುವ ಜತೆಗೆ ಚುನಾವಣೆಯಲ್ಲಿ ಮೈತ್ರಿ ಧರ್ಮವನ್ನು ಪಾಲಿಸುವ ಬಗ್ಗೆಯೂ ತೀರ್ಮಾನಗಳು ಆದವು.
ಈ ಸಮನ್ವಯ ಸಮಿತಿ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ್, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ, ಮಾಜಿ ಸಚಿವರುಗಳಾದ ಗೋವಿಂದ ಕಾರಜೋಳ, ಸಿ.ಟಿ. ರವಿ, ರಾಜ್ಯ ಬಿಜೆಪಿ ಉಸ್ತುವಾರಿ ರಾಧ ಮೋಹನ್‌ದಾಸ್ ಅಗರ್‌ವಾಲ್, ಎರಡು ಪಕ್ಷಗಳ ಎಲ್ಲ ಶಾಸಕರುಗಳು, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಎಲ್ಲ ಪ್ರಮುಖ ಮುಖಂಡರುಗಳು ಭಾಗಿಯಾಗಿ ಒಗ್ಗಟ್ಟಿನ ಮಂತ್ರ ಜಪಿಸಿದರು.