ಬೈಂದೂರು ಮಾಜಿ ಶಾಸಕ ಸುಕುಮಾರ ಶೆಟ್ಟಿ ಕಾಂಗ್ರೆಸ್‌ಗೆ ಸೇರ್ಪಡೆಗೆ ವೇದಿಕೆ ಸಜ್ಜು?

Views: 151
ಬೈಂದೂರು: ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಉಡುಪಿ ಜಿಲ್ಲೆಯ ಬೈಂದೂರಿನ ಮಾಜಿ ಶಾಸಕರಾಗಿದ್ದ ಬಿ.ಎಂ. ಸುಕುಮಾರ ಶೆಟ್ಟರು ಬಿಜೆಪಿ ತೊರೆದು, ಕಾಂಗ್ರೆಸ್ ಸೇರ್ಪಡೆಗೆ ವೇದಿಕೆ ಸಜ್ಜಾಗಿದೆ.
ಲೋಕಸಭಾ ಚುನಾವಣೆಯ ಕಾವು ಏರುತ್ತಿದ್ದಂತೆ ಬೈಂದೂರಿನ ಬಿಜೆಪಿ ಮಾಜಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಬೆಂಗಳೂರಿನಲ್ಲಿ ಸೋಮವಾರ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ, ಮುಖಂಡರಾದ ಆಯನೂರು ಮಂಜುನಾಥ್, ಸುಧೀರ್ ಕುಮಾರ್ ಜತೆಗಿದ್ದರು.
ಬಿಜೆಪಿಯಿಂದ ಎರಡು ಬಾರಿ ಬೈಂದೂರು ಕ್ಷೇತ್ರದಿಂದ ಸ್ಪರ್ಧಿಸಿದ್ದು, 2013 ರಲ್ಲಿ ಕಾಂಗ್ರೆಸ್‌ನ ಗೋಪಾಲ ಪೂಜಾರಿ ವಿರುದ್ಧ ಸೋತರೆ, 2018 ರಲ್ಲಿ ಅವರನ್ನು ಸೋಲಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೇಟು ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. ಆಗಿನಿಂದಲೂ ಸಾರ್ವಜನಿಕ ಸಭೆ, ಸಮಾರಂಭಗಳಿಂದ ದೂರವಿದ್ದರು. ಆವಾಗಲೇ ಕಾಂಗ್ರೆಸ್ ಸೇರ್ಪಡೆ ವಿಚಾರ ಹೇಳಿ ಕೊಂಡಿದ್ದರು. ಈಗ ಚುನಾವಣೆ ಸಮೀಪಿಸುತ್ತಿರುವುದರಿಂದ ಕಾಂಗ್ರೆಸ್ ಸೇರ್ಪಡೆ ಖಚಿತಗೊಂಡಿದೆ.
ಸುಕುಮಾರ ಶೆಟ್ಟರು ಈ ಹಿಂದೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದರು. ಈಗ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮಧು ಬಂಗಾರಪ್ಪ, ಗೃಹಸಚಿವ ಡಾ| ಜಿ. ಪರಮೇಶ್ವರ್, ಇಂಧನ ಸಚಿವ ಕೆ.ಜೆ. ಜಾರ್ಜ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.
ಸುಕುಮಾರ ಶೆಟ್ಟರನ್ನು ತಮ್ಮ ಕಡೆಗೆ ಸೆಳೆದುಕೊಂಡರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಗೀತಾ ಶಿವರಾಜ್ ಕುಮಾರ್ ಅವರಿಗೆ ಅನುಕೂಲ ಆಗಬಹುದು ಎನ್ನುವ ನಿಟ್ಟಿನಲ್ಲಿ ಈಗ ಸೇರ್ಪಡೆಗೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್‌ಗೆ ಸೇರುವುದರಲ್ಲಿ ಯಾವುದೇ ಸಂಶಯವಿಲ್ಲ ಕಾಂಗ್ರೆಸ್ ಪ್ರಮುಖ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ. ಶೀಘ್ರವೇ ಕ್ಷೇತ್ರದ ಹಿತೈಷಿಗಳು, ಬೆಂಬಗಲಿಗರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಸುಕುಮಾರ್ ಶೆಟ್ಟಿ ಹೇಳಿಕೆ ನೀಡಿದ್ದಾರೆ.