ಭೀಕರ ರಸ್ತೆ ಅಪಘಾತ :ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

Views: 243
ಕನ್ನಡ ಕರಾವಳಿ ಸುದ್ದಿ: ಕಾರು ಮತ್ತು ಟಿಪ್ಪರ್ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಹಾಗೂ ಚಿಕ್ಕಿಂದುವಾಡಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಶನಿವಾರ ಶನಿವಾರ ಬೆಳಿಗ್ಗೆ ಸಂಭವಿಸಿದೆ.
ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿಯ ಮುಖ್ಯರಸ್ತೆಯಲ್ಲಿ ಶನಿವಾರ ಬೆಳಗ್ಗೆ ಟಿಪ್ಪರ್ ಹಾಗೂ ಕಾರು ನಡುವೆ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರನ್ನು ಮಂಡ್ಯ ಮೂಲದವರು ಎಂದು ಗುರುತಿಸಲಾಗಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಲಕ್ಷ್ಮೀಗೌಡನದೊಡ್ಡಿಯ ನಿತಿನ್ (22), ಮಂಡ್ಯ ನಗರದ ಶ್ರೀರಾಮನಗರ ಬಡಾವಣೆಯ ಸುಹಾಸ್ (21), ಮಂಡ್ಯ ತಾಲ್ಲೂಕಿನ ಹಲ್ಲೆಗೆರೆಯ ಶ್ರೇಯಸ್ (21), ಮೈಸೂರಿನ ಅಲಹಳ್ಳಿಯ ಶ್ರೀಲಕ್ಷ್ಮಿ (22) ಹಾಗೂ ಪಿರಿಯಾಪಟ್ಟಣ ತಾಲ್ಲೂಕಿನ ಶ್ಯಾನಭೋಗನಹಳ್ಳಿಯ ಲಿಖಿತಾ (22) ಮೃತಪಟ್ಟವರು. ಎಲ್ಲರೂ ಮೈಸೂರಿನ ಎಂಐಟಿ ಎಂಜಿನಿಯರ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಜಿನಿಯರಿಂಗ್ ಓದುತ್ತಿದ್ದರು ಎಂದು ತಿಳಿದುಬಂದಿದೆ.
ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಶಿವರಾತ್ರಿ ಜಾತ್ರಾ ಮಹೋತ್ಸವದ ಮಹಾ ರಥೋತ್ಸವದಲ್ಲಿ ಪಾಲ್ಗೊಳ್ಳಲು ಇವರು ಕಾರಿನಲ್ಲಿ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಅಪಘಾತ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.