ಮರಣೋತ್ತರ ಪರೀಕ್ಷೆಯ ವರದಿಗೆ ಲಂಚ: ಸರಕಾರಿ ಆಸ್ಪತ್ರೆಯ ವೈದ್ಯ ಲೋಕಾಯುಕ್ತ ಬಲೆಗೆ

Views: 86
ಕನ್ನಡ ಕರಾವಳಿ ಸುದ್ದಿ: ಶಿವಮೊಗ್ಗ ಶಿಕಾರಿಪುರ ತಾಲೂಕು ಆಸ್ಪತ್ರೆಯ ವೈದ್ಯ ಡಾ.ಗೋಪಾಲ್ ಜಿ.ಹರಿಗಿ ಅವರು ಮರಣೋತ್ತರ ಪರೀಕ್ಷೆಯ ವರದಿ ನೀಡಲು 20 ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟು 10 ಸಾವಿರ ರೂ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಶಿಕಾರಿಪುರ ತಾಲೂಕು ಕಪ್ಪನಹಳ್ಳಿ ಗ್ರಾಮದ ಸುನೀಲ್ ಎಂಬವರು ಮರಣೋತ್ತರ ಪರೀಕ್ಷೆ ವರದಿ ನೀಡಲು ಹಣದ ಬೇಡಿಕೆ ಇಟ್ಟಿರುವ ಕುರಿತು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಲಂಚ ಸ್ವೀರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ದೂರುದಾರ ಸುನೀಲ್ ಅವರ ಸ್ನೇಹಿತ ರಾಕೇಶ್ ಅವರ ಅಕ್ಕನ ಗಂಡ ಸತೀಶ್ ಮಂಚಿ ಮೃತಪಟ್ಟಿದ್ದು, ಮರಣೋತ್ತರ ಪರೀಕ್ಷೆಯ ವರದಿ ನೀಡಲು ವೈದ್ಯ ಡಾ.ಗೋಪಾಲ್ ಜಿ ಹರಿಗಿ 20 ಸಾವಿರ ರೂ ಬೇಡಿಕೆ ಇಟ್ಟಿದ್ದಾರೆ. ಆಸ್ಪತ್ರೆಯ ಕೊಠಡಿಯಲ್ಲಿ ಡಾ.ಗೋಪಾಲ್ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಟ್ರಾಪ್ ಮಾಡಿದ್ದಾರೆ.
ಶಿವಮೊಗ್ಗ ಲೋಕಾಯುಕ್ತ ಎಸ್ಪಿ ಮಂಜುನಾಥ ಚೌಧರಿ ಅವರ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಪೊಲೀಸ್ ಇನ್ಸ್ ಪೆಕ್ಟರ್ ಗುರುರಾಜ ಅವರು ಆರೋಪಿ ವೈದ್ಯರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.