ಮಾಂಸಾಹಾರ ಸೇವಿಸಿ ಸುತ್ತೂರು ಜಗದ್ಗುರುಗಳ ಗದ್ದುಗೆಗೆ ಸಿಎಂ ಭೇಟಿ ಕೊಟ್ಟಿದ್ದು ದುರಂತ: ಬಿವೈ ವಿಜಯೇಂದ್ರ

Views: 35
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಕಾಂಗ್ರೆಸ್ ನಾಯಕರು ಬುಧವಾರ ಮಧ್ಯಾಹ್ನ ದೆಹಲಿಯಲ್ಲಿ ಮಾಂಸಾಹಾರ ಸೇವಿಸಿ ರಾತ್ರಿ ಸುತ್ತೂರು ಜಗದ್ಗುರುಗಳ ಗದ್ದುಗೆಗೆ ಭೇಟಿ ಕೊಟ್ಟ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಪ್ರತಿಕ್ರಿಯಿಸಿದ್ದು, ಇದು ಬಹಳ ದುರದೃಷ್ಟಕರ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಗಳು ಎಂಬುದನ್ನು ಎಲ್ಲೋ ಒಂದು ಕಡೆ ಮರೆಯುತ್ತಿದ್ದಾರೆ ಎಂಬುದು ನನ್ನ ಭಾವನೆ. ಇದು ಮೊದಲ ಬಾರಿ ಏನಲ್ಲ. ಹಲವು ಸಂದರ್ಭಗಳಲ್ಲಿ ಈ ರೀತಿ ಘಟನೆಗಳು ಪುನರಾವರ್ತನೆ ಆಗಿವೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ದೇವರ ಬಗ್ಗೆ ಎಷ್ಟು ಭಕ್ತಿ ಭಾವನೆ ಇಟ್ಟುಕೊಂಡಿದ್ದಾರೆ ಎಂಬುದು ಬೇರೆ ಮಾತು. ಆದರೆ, ರಾಜ್ಯದ ಮುಖ್ಯಮಂತ್ರಿಯಾಗಿ ಅವರ ನಡವಳಿಕೆಯನ್ನು ಸಮಾಜ, ಪ್ರತಿಯೊಬ್ಬರೂ ಗಮನಿಸುತ್ತಾರೆ. ಈ ಘಟನೆ ನಿಜವಾಗಿಯೂ ಖಂಡನೀಯ. ಅದರಲ್ಲೂ ಸುತ್ತೂರಿನ ಪವಿತ್ರ ಗದ್ದುಗೆಗೆ ಭೇಟಿ ಕೊಟ್ಟದ್ದು ನಿಜವಾಗಲೂ ಒಂದು ದುರಂತ ಎಂದು ತಿಳಿಸಿದರು.
ಯಾಕೆ ಪದೇಪದೇ ಇಂಥ ಘಟನೆ ನಡೆಯುತ್ತದೆ ಎಂದು ಅವರೇ ಉತ್ತರಿಸಬೇಕು. ಒಂದು ಕಡೆ ಭಾಷಣ ಮಾಡಿದ ಮುಖ್ಯಮಂತ್ರಿಯವರು ಅಣ್ಣ ಬಸವಣ್ಣನನ್ನು ನೆನಪು ಮಾಡಿಕೊಳ್ಳುತ್ತಾರೆ. ಅಂದರೆ, ಅವರ ನಡೆಗೂ ನುಡಿಗೂ ಅಜಗಜಾಂತರ ವ್ಯತ್ಯಾಸವಿದೆ. ಎಲ್ಲ ಭಕ್ತರ ಭಾವನೆಗೆ ಧಕ್ಕೆ ಬರುವಂತೆ ಮುಖ್ಯಮಂತ್ರಿಗಳು ನಡೆದುಕೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು