ಮುಡಾ ನಿವೇಶನ ವಿವಾದ: ಬೆನ್ನಿಗೆ ನಿಂತ ಹೈಕಮಾಂಡ್ ವರಿಷ್ಠರಿಗೆ ಥ್ಯಾಂಕ್ಸ್ ಹೇಳಿದ ಸಿಎಂ ಸಿದ್ದರಾಮಯ್ಯ

Views: 24
ಮುಡಾ ಪ್ರಕರಣದ ಕುರಿತು ಮುಂದಿನ ವಾರ ನಡೆಯಲಿರುವ ಹೈಕೋರ್ಟ್ ವಿಚಾರಣೆಗೆ ಮುಂಚಿತವಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಉನ್ನತ ನಾಯಕತ್ವದಿಂದ ಬೆಂಬಲ ಪಡೆದಿದ್ದಾರೆ. ಈ ಬಗ್ಗೆ ನ್ಯಾಯಾಲಯದಲ್ಲಿ ಹೋರಾಡಲು ಪಕ್ಷವು ಮುಂದಾಗಿದೆ ಎಂದು ತಿಳಿದುಬಂದಿದೆ.
ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ನಂತರ, “ಸಿದ್ದರಾಮಯ್ಯ ಅವರು ತಮ್ಮ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಕರ್ನಾಟಕ ರಾಜ್ಯಪಾಲರ ಕ್ರಮ ಕಾನೂನುಬಾಹಿರವಾಗಿದೆ ಮತ್ತು ಅದನ್ನು ಈಗಾಗಲೇ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ” ಎಂದರು.
ಹೈಕಮಾಂಡ್ ಭೇಟಿ ನಂತರ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ನಮ್ಮ ಹೈಕಮಾಂಡ್‌ನ ನಾಯಕರುಗಳಾದ ಮಲ್ಲಿಕಾರ್ಜುನ ಖರ್ಗೆಯವರಿಗೆ, ರಾಹುಲ್ ಗಾಂಧಿಯವರಿಗೆ, ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲ ಅವರಿಗೆ ನನ್ನ ಧನ್ಯವಾದಗಳು. ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು, ರಾಜ್ಯಪಾಲರು ನನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಪಕ್ಷಪಾತ ಧೋರಣೆಯ ಬಗ್ಗೆ ಇಂದಿನ ಸಭೆಯಲ್ಲಿ ವಿವರಿಸಿದ್ದೇವೆ. ರಾಜ್ಯಪಾಲರ ನಿರ್ಣಯದ ವಿರುದ್ಧ ನಾನು ಈಗಾಗಲೇ ನ್ಯಾಯಾಲಯದ ಮೊರೆ ಹೋಗಿದ್ದೇನೆ, ನನಗೆ ನ್ಯಾಯ ವ್ಯವಸ್ಥೆಯಲ್ಲಿ, ಈ ನೆಲದ ಕಾನೂನಿನಲ್ಲಿ ನಂಬಿಕೆಯಿದೆ. ರಾಜ್ಯಪಾಲರು ತೆಗೆದುಕೊಂಡಿರುವ ನಿರ್ಣಯ ಅಸಾಂವಿಧಾನಿಕ ಮತ್ತು ಕಾನೂನು ಬಾಹಿರವಾಗಿದ್ದು, ನ್ಯಾಯಾಲಯದಲ್ಲಿ ನ್ಯಾಯ ಸಿಗುವ ಭರವಸೆಯಿದೆ. ನನ್ನ ಬೆಂಬಲಕ್ಕೆ ನಿಂತಿರುವ ಪಕ್ಷದ ಹೈಕಮಾಂಡ್ ಗೆ ಮತ್ತೊಮ್ಮೆ ಧನ್ಯವಾದಗಳು” ಎಂದು ಹೇಳಿದ್ದಾರೆ.
ನವದೆಹಲಿಯಲ್ಲಿ ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರೊಂದಿಗೆ ಸಂವಾದ ನಡೆಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಜೊತೆಯಲ್ಲಿದ್ದರು.