ಲೋಕಸಭಾ ಚುನಾವಣೆ ಸ್ಪರ್ಧಿಸಲು ಸಚಿವರು ಮತ್ತು ಶಾಸಕರು ಹಿಂದೇಟು…’ಗೆಲ್ಲುವ’ ಅಭ್ಯರ್ಥಿಗಳ ಹುಡುಕಾಟ.. ರಾಜ್ಯ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ

Views: 107
ಬೆಂಗಳೂರು: ಕರ್ನಾಟಕದಲ್ಲಿ ಸಚಿವರು ಮತ್ತು ಶಾಸಕರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಹಿಂದೇಟು ಹಾಕುತ್ತಿರುವುದು ಕಾಂಗ್ರೆಸ್‌ಗೆ ತಲೆನೋವಾಗಿ ಪರಿಣಮಿಸಿದ್ದು, ‘ಗೆಲ್ಲುವ’ ಅಭ್ಯರ್ಥಿಗಳ ಹುಡುಕಾಟ ಮುಂದುವರಿದಿದೆ.
ಕಾಂಗ್ರೆಸ್ ಏಳು ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳನ್ನು ಘೋಷಿಸಿದೆ ಉಳಿದ 21 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಬಿಡುಗಡೆಯಾದ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಯಾವುದೇ ಸಚಿವರು ಮತ್ತು ಶಾಸಕರ ಹೆಸರು ಇರಲಿಲ್ಲ.
ಪಕ್ಷದ ಮೂಲಗಳ ಪ್ರಕಾರ, ರಾಜ್ಯದ ಹಲವು ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳ ಹುಡುಕಾಟವು ಕಷ್ಟವಾಗಿದ್ದು, ಕಾಂಗ್ರೆಸ್ ನಾಯಕತ್ವವು ಕೆಲವು ಸಚಿವರು ಮತ್ತು ಶಾಸಕರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮನವೊಲಿಸಲು ಪ್ರಯತ್ನಿಸುತ್ತಿದೆ.
ಏಳರಿಂದ ಎಂಟು ಸಚಿವರನ್ನು ಕಣಕ್ಕಿಳಿಸಲು ಪಕ್ಷದೊಳಗೆ ಚರ್ಚೆ ನಡೆಯುತ್ತಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಗೃಹ ಸಚಿವ ಜಿ ಪರಮೇಶ್ವರ ಇತ್ತೀಚೆಗೆ ಹೇಳಿದ್ದರು.
ಕೆಲವು ಸಚಿವರು ತಮ್ಮ ಸ್ಪರ್ಧೆಗೆ ಬದಲಾಗಿ ತಮ್ಮ ಕುಟುಂಬದ ಸದಸ್ಯರ ಉಮೇದುವಾರಿಕೆಗೆ ಒತ್ತಾಯಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಸಚಿವರು ಮತ್ತು ಶಾಸಕರ ಸಂಬಂಧಿಕರನ್ನು ಕಣಕ್ಕಿಳಿಸಿದರೆ ಅದರಿಂದ ಪಕ್ಷದ ಮೇಲೆ ಉಂಟಾಗುವ ಪರಿಣಾಮದ ಬಗ್ಗೆ ಪಕ್ಷದ ನಾಯಕತ್ವವು ಚಿಂತಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಮಾರ್ಚ್ 19 ರಾತ್ರಿ ಅಥವಾ 20 ರಂದು ಬೆಳಿಗ್ಗೆ ನಮ್ಮ ಎಲ್ಲಾ ಅಭ್ಯರ್ಥಿಗಳನ್ನು ಘೋಷಿಸಲಾಗುವುದು ಎಂದು ತಿಳಿದು ಬಂದಿದೆ.
ಮೂಲಗಳ ಪ್ರಕಾರ, ಚಾಮರಾಜನಗರದಿಂದ ಎಚ್‌ಸಿ ಮಹದೇವಪ್ಪ, ಕೋಲಾರದಿಂದ ಕೆಎಚ್ ಮುನಿಯಪ್ಪ, ಬಳ್ಳಾರಿಯಿಂದ ಬಿ ನಾಗೇಂದ್ರ, ಬೆಳಗಾವಿಯಿಂದ ಸತೀಶ್ ಜಾರಕಿಹೊಳಿ, ಬೀದರ್‌ನಿಂದ ಈಶ್ವರ್ ಖಂಡ್ರೆ, ಬೆಂಗಳೂರು ಉತ್ತರದಿಂದ ಕೃಷ್ಣ ಬೈರೇಗೌಡ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ತಯಾರು ಮಾಡಿಕೊಂಡಿದೆ.
ಕೃಷ್ಣ ಬೈರೇಗೌಡರು ತಾವು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುವುದಿಲ್ಲ ಎಂದು ಪಕ್ಷದ ನಾಯಕತ್ವಕ್ಕೆ ತಿಳಿಸಿದ್ದಾರೆ ಎನ್ನಲಾಗಿದೆ. ಅವರು 2019ರಲ್ಲಿ ಬೆಂಗಳೂರು ಉತ್ತರದಿಂದ ಮತ್ತು 2009ರಲ್ಲಿ ಬೆಂಗಳೂರು ದಕ್ಷಿಣದಿಂದ ಸ್ಪರ್ಧಿಸಿ ಸೋತಿದ್ದರು.
ಮಹದೇವಪ್ಪ ಅವರು ತಮ್ಮ ಪುತ್ರ ಸುನೀಲ್ ಬೋಸ್‌ಗೆ ಚಾಮರಾಜನಗರದಿಂದ ಟಿಕೆಟ್ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ ಎನ್ನಲಾಗಿದೆ.
2019ರ ಲೋಕಸಭೆ ಚುನಾವಣೆಯಲ್ಲಿ ಸೋತ ನಂತರ ರಾಜ್ಯ ರಾಜಕೀಯಕ್ಕೆ ಮರಳಿದ ಏಳು ಬಾರಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವರಾಗಿರುವ ಮತ್ತೋರ್ವ ಹಿರಿಯ ಸಚಿವ ಮುನಿಯಪ್ಪ ಅವರು ತಮ್ಮ ಅಳಿಯ ಶಶಿಧರ್ ಜೆಇ ಅವರನ್ನು ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.
ಅದೇ ರೀತಿ ಚಿಕ್ಕೋಡಿಗೆ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ, ಬೆಳಗಾವಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್, ಬಳ್ಳಾರಿಗೆ ನಾಗೇಂದ್ರ ಸಹೋದರ ವೆಂಕಟೇಶ್ ಪ್ರಸಾದ್, ಬೀದರ್‌ಗೆ ಈಶ್ವರ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಹೆಸರು ಕೇಳಿಬರುತ್ತಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ, ಮುನಿಯಪ್ಪ ಸೇರಿದಂತೆ ಹಲವು ಪ್ರಮುಖ ನಾಯಕರು ಸೋಲು ಕಂಡಿದ್ದರಿಂದ ಅನೇಕ ಹಿರಿಯ ನಾಯಕರು ಸ್ಪರ್ಧೆಯಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.