ಜನಮನ

ವಿದ್ಯುತ್ ಅಭಾವ: ಹೊರ ರಾಜ್ಯಗಳಿಂದ ಖರೀದಿಸಲು ಮುಂದಾದ ಸರ್ಕಾರ

Views: 0

ರಾಜ್ಯದಲ್ಲಿ ವಿದ್ಯುತ್ ಅಭಾವ ತಲೆದೋರಿರುವ ಹಿನ್ನೆಲೆಯಲ್ಲಿ ವಿದ್ಯುತ್ ಪೂರೈಕೆಯನ್ನು ಸರಿದೂಗಿಸಲು ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿಸಲು ಸರ್ಕಾರ ಮುಂದಾಗಿದೆ.

ರಾಜ್ಯದಲ್ಲಿ ಪ್ರಸ್ತುತ 16 ಸಾವಿರ ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಇದ್ದು, ಕಳೆದ ವರ್ಷ 12 ಸಾವಿರ ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಇತ್ತು. ಪ್ರಸ್ತುತ ವಿದ್ಯುತ್ ಉತ್ಪಾದನೆಯಲ್ಲೂ ಕೊರತೆ ಇದ್ದು, ರಾಜ್ಯದ ಹಲವೆಡೆ ಅನಿಯಮಿತ ಅನಧಿಕೃತ ಲೋಡ್‌ಶೆಡ್ಡಿಂಗ್ ಜಾರಿಯಲ್ಲಿದೆ.

ವಿದ್ಯುತ್ ಕೊರತೆಯಿಂದ ಆಗಿರುವ ತೊಂದರೆಯನ್ನು ಸರಿಪಡಿಸಲು ಇಂಧನ ಇಲಾಖೆ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದು, ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿಸುವ ಪ್ರಯತ್ನಗಳು ನಡೆದಿವೆ.

ಮಳೆ ಕೊರತೆಯಿಂದ ವಿದ್ಯುತ್ ಉತ್ಪಾದನೆಯೂ ಕಡಿಮೆಯಾಗಿದೆ. ಹಾಗೆಯೇ ವಿದ್ಯುತ್‌ಗೆ ಕೃಷಿ ವಲಯದಿಂದ ಬೇಡಿಕೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುಸಿದಿರುವ ವಿದ್ಯುತ್ ಉತ್ಪಾದನೆಯನ್ನು ಗಮನದಲ್ಲಿಟ್ಟುಕೊಂಡು ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿಸುವ ಪ್ರಯತ್ನಗಳು ನಡೆದಿವೆ.

ರಾಜ್ಯದಲ್ಲಿ ಜಲ ವಿದ್ಯುತ್ ಉತ್ಪಾದನೆ ಮತ್ತು ಪವನ ಮತ್ತು ಸೋಲಾರ್ ವಿದ್ಯುತ್ ಉತ್ಪಾದನೆಯೂ ಗಣನೀಯವಾಗಿ ಕಡಿಮೆಯಾಗಿದೆ. ಹಾಗಾಗಿ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಇದರಿಂದ ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಿಗದೆ ರೈತರು ಸಂಕಷ್ಟದಲ್ಲಿದ್ದು, ವಿದ್ಯುತ್ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ವಿದ್ಯುತ್ ಖರೀದಿಗೆ ಮುಂದಾಗಿದ್ದು, ಈಗಾಗಲೇ ಪಂಜಾಬ್ ಸೇರಿದಂತೆ ವಿದ್ಯುತ್ ಉತ್ಪಾದನೆ ಹೆಚ್ಚಿರುವ ರಾಜ್ಯಗಳಿಂದ ವಿದ್ಯುತ್ ಖರೀದಿ ಸಂಬಂಧ ಮಾತುಕತೆಗಳು ನಡೆದಿವೆ.

ರಾಜ್ಯದಲ್ಲಿ ಪ್ರಸ್ತುತ 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಎದುರಾಗಿದೆ. ಬರದ ಕಾರಣ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಬೇಡಿಕೆ ಗಣನೀಯವಾಗಿ ಹೆಚ್ಚಿದೆ. ಬೇಡಿಕೆಗೆ ತಕ್ಕಂತೆ ವಿದ್ಯುತ್ ಉತ್ಪಾದನೆಯಾಗುತ್ತಿಲ್ಲ. ಇದರಿಂದ ಕೃಷಿ ಪಂಪ್‌ಸೆಟ್‌ಗಳಿಗೆ ದಿನಕ್ಕೆ 2 ತಾಸು ವಿದ್ಯುತ್ ಸಿಗುತ್ತಿಲ್ಲ. ಹೀಗಾಗಿ, ವಿದ್ಯುತ್ ಕೊರತೆಯನ್ನು ನೀಗಿಸಲು ಪಂಜಾಬ್ ಮತ್ತು ಉತ್ತರ ಪ್ರದೇಶದಿಂದ ವಿದ್ಯುತ್ ಖರೀದಿಯ ಪ್ರಯತ್ನಗಳನ್ನು ಸರ್ಕಾರ ನಡೆಸಿದೆ.

ರಾಜ್ಯದಲ್ಲಿ ಜಲವಿದ್ಯುತ್, ಪವನ ಶಕ್ತಿ, ಉಷ್ಣ ವಿದ್ಯುತ್. ಸೌರಶಕ್ತಿ ಸೇರಿದಂತೆ ಎಲ್ಲ ಮೂಲಗಳಿಂದ ನಿತ್ಯ 10 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಉಳಿದಂತೆ ಕೇಂದ್ರದಿಂದ 3ಸಾವಿರ, ಹೊರ ರಾಜ್ಯಗಳಿಂದ 1 ಸಾವಿರ ಮೆಗಾವ್ಯಾಟ್ ವಿದ್ಯುತ್ ಪೂರೈಕೆಯಾಗುತ್ತಿದ್ದು, 2ಸಾವಿರ ಮೆಗಾವ್ಯಾಟ್ ಕೊರತೆ ಇದೆ. ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸರಿಯಾಗಿ ಪೂರೈಕೆಯಾಗದ ಕಾರಣ ಬರದಿಂದ ಕಂಗೆಟ್ಟಿರುವ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.

ವಿದ್ಯುತ್ ಕಚೇರಿಗೆ ಬೀಗ ಎಂದು ಬೊಮ್ಮಾಯಿ 

ರಾಜ್ಯದ ರೈತರಿಗೆ ನಿತ್ಯ 7 ಗಂಟೆ ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡದಿದ್ದರೆ ವಿದ್ಯುತ್ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿಂದು ಆಯೋಜಿಸಲಾಗಿದ್ದ ರಾಜ್ಯ ಸರ್ಕಾರದ ರೈತ ವಿರೋಧಿ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಿತ್ಯ 7ಗಂಟೆ ತ್ರಿಫೇಸ್ ವಿದ್ಯುತ್ ಪಡೆಯುವುದು ರೈತರ ಹಕ್ಕು. ಈ ಹಕ್ಕನ್ನು ಕಾಂಗ್ರೆಸ್ ಸರ್ಕಾರ ಕಿತ್ತುಕೊಳ್ಳುತ್ತಿದೆ. ಇದು ಸರಿಯಲ್ಲ. ಸರ್ಕಾರ ರೈತರಿಗೆ ನಿತ್ಯ 7 ಗಂಟೆ ತ್ರಿಫೇಸ್ ವಿದ್ಯುತ್ ನೀಡದಿದ್ದರೆ ಮುಂದಿನ ದಿನಗಳಲ್ಲಿ ವಿದ್ಯುತ್ ಕಚೇರಿಗಳಿಗೆ ಬೀಗ ಹಾಕಿ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದರು.

ಈ ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ ವಿದ್ಯುತ್ ಇಲಾಖೆಗೆ 10 ಸಾವಿರ ಕೋಟಿ ರೂ. ಅನುದಾನ ನೀಡಿದ್ದೆ. ಕಾಂಗ್ರೆಸ್ ಸರ್ಕಾರ ಯಾವುದೇ ಅನುದಾನ ನೀಡಿಲ್ಲ. ಅನುದಾನ ನೀಡಲು ಹಣ ಇಲ್ಲ. ಕಲ್ಲಿದ್ದಲು ಖರೀದಿಸಲು ಹಣ ಇಲ್ಲ ಎಂದು ಟೀಕಿಸಿದ ಅವರು, ರೈತರಿಗೆ 2 ತಾಸು ಮಾತ್ರ ವಿದ್ಯುತ್ ಕೊಡುತ್ತಿದ್ದಾರೆ. ಇದರಿಂದ ರೈತ ಸಂಕಷ್ಟದಲ್ಲಿದ್ದಾನೆ. ಇದು ರೈತ ವಿರೋಧಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

ರೈತರಿಗೆ ಸರಿಯಾಗಿ ವಿದ್ಯುತ್ ಕೊಡದಿದ್ದರೆ ಪ್ರತಿಭಟನೆ ಮಾಡುತ್ತೇವೆ. ಎಷ್ಟು ಜನರ ಮೇಲೆ ಕೇಸ್ ಹಾಕಿ ಜೈಲಿಗೆ ಹಾಕುತ್ತೀರೋ ಹಾಕಿ, ರೈತರಿಗಾಗಿ ನಾವು ಜೈಲಿಗೆ ಹೋಗಲು ಸಿದ್ದ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಆರ್. ಅಶೋಕ್, ಡಾ. ಕೆ. ಸುಧಾಕರ್, ಸಂಸದ ಮುನಿಸ್ವಾಮಿ ಉಪಸ್ಥಿತರಿದ್ದರು

Related Articles

Back to top button