ಶಿವಮೊಗ್ಗದಲ್ಲಿ ಸ್ಪರ್ಧೆ ಮಾಡಿಯೇ ಮಾಡುತ್ತೇನೆ ಎಂದ ಈಶ್ವರಪ್ಪಗೆ ದೆಹಲಿಗೆ ಬನ್ನಿ ಶಾ ಬುಲಾವ್..!

Views: 106
ಶಿವಮೊಗ್ಗ :ಲೋಕಸಭಾ ಚುನಾವಣೆಯಲ್ಲಿ ತಮ್ಮ ಪುತ್ರನಿಗೆ ಟಿಕೆಟ್ ಸಿಗದೆ ಬಿಜೆಪಿ ನಾಯಕರ ವಿರುದ್ಧ ಬಂಡಾಯದ ಕಹಳೆ ಮೊಳಗಿಸಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪರವರಿಗೆ ದೆಹಲಿಗೆ ಬರುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದಾರೆ.
ಬಿಜೆಪಿ ನಾಯಕರ ಜತೆ ಸಭೆ ನಡೆಸಿದ ಸಂದರ್ಭದಲ್ಲೇ ಅಮಿತ್ ಶಾ ಈಶ್ವರಪ್ಪರವರಿಗೆ ದೂರವಾಣಿ ಕರೆ ಮಾಡಿ ಚರ್ಚೆ ನಡೆಸಿದ್ದಾರೆ.
ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಈಶ್ವರಪ್ಪರವರಿಗೆ ಅಮಿತ್ ಶಾ ದೂರವಾಣಿ ಕರೆ ಮಾಡಿ ದೆಹಲಿಗೆ ಬರುವಂತೆ ಸೂಚಿಸಿದ್ದಾರೆ.
ಈ ಕುರಿತು ಈಶ್ವರಪ್ಪರವರು ತಮ್ಮ ಆಪ್ತರ ಜತೆಮಾಹಿತಿ ವಿನಿಮಯ ಮಾಡಿಕೊಂಡಿದ್ದು, ನಾಳೆ ದೆಹಲಿಗೆ ತೆರಳುವುದಾಗಿ ತಿಳಿಸಿದ್ದಾರೆ. ಆದರೆ,ತಮ್ಮ ನಿಲುವಿಗೆ ಬದ್ಧರಾಗಿರುವುದಾಗಿ ಹೇಳಿರುವುದು ಕುತೂಹಲಕ್ಕೆಡೆ ಮಾಡಿಕೊಟ್ಟಿದೆ.
ಈಶ್ವರಪ್ಪರವರು ಅಮಿತ್ ಶಾರವರ ಕರೆಗೆ ಸಕಾರಾತ್ಮಕವಾಗಿ ಸ್ಪಂಧಿಸಿದ್ದಾರೆ. ಅವರ ಆಹ್ವಾನದ ಮೇರೆಗೆ ದೆಹಲಿಗೆ ತೆರಳುತ್ತೇನೆ. ಆದರೆ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬ ಅಂಶವನ್ನು ಆಪ್ತರ ಬಳಿ ಹೇಳಿಕೊಂಡಿದ್ದಾರೆಂದು ಮೂಲಗಳು ತಿಳಿಸಿವೆ.
ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಶಿವಮೊಗ್ಗದಲ್ಲಿ ಸ್ಪರ್ಧೆ ಮಾಡಿಯೇ ಮಾಡುತ್ತೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಲೋಕಸಭೆಗೆ ಟಿಕೆಟ್ ಹಂಚಿಕೆಯಾದ ತಕ್ಷಣ ಈಶ್ವರಪ್ಪರವರು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಕಿಡಿಕಾರುತ್ತಲೇ ಬಂದಿದ್ದಾರೆ. ತಾವು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದನ್ನು ಆ ಬ್ರಹ್ಮ ಬಂದರೂ ತಡೆಯಲು ಸಾಧ್ಯವಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ.