ಸೀಟು ಹಂಚಿಕೆ ಹೆಚ್‌ಡಿಕೆ ಅಮಿತ್-ಶಾ ಜತೆ ಮಹತ್ವದ ಮಾತುಕತೆ ಏನು?

Views: 26
ಮುಂಬರುವ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಕುರಿತಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು.
ಹಿರಿಯ ನ್ಯಾಯವಾದಿ ಫಾಲಿನಾರಿಮನ್ ನಿಧನದ ಹಿನ್ನೆಲೆಯಲ್ಲಿ ಅಂತಿಮ ದರ್ಶನ ಪಡೆಯಲು ನಿನ್ನೆ ಕುಮಾರಸ್ವಾಮಿ ಅವರು ದೆಹಲಿಗೆ ತೆರಳಿದ್ದರು. ಇಂದು ತಮ್ಮ ಪುತ್ರ ನಿಖಿಲ್‌ಕುಮಾರಸ್ವಾಮಿ ಅವರೊಂದಿಗೆ ತೆರಳಿ ಅಮಿತ್ ಶಾ ಜತೆ ಮಾತುಕತೆ ನಡೆಸಿದರು.
ಮೂಲಗಳ ಪ್ರಕಾರ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಡಾ. ಮಂಜುನಾಥ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆದಿದೆ. ಆದರೆ, ಈ ಬಗ್ಗೆ ಮಂಜುನಾಥ್ ಅವರು ರಾಜಕೀಯಕ್ಕೆ ಬರುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಆದರೆ, ಮಂಜುನಾಥ್ ಅವರನ್ನೇ ಕಣಕ್ಕಿಳಿಸುವ ಬಗ್ಗೆ ಜೆಡಿಎಸ್ ಉತ್ಸುಕವಾಗಿದ್ದು, ಈ ಬಗ್ಗೆ ಅಮಿತ್ ಶಾ ಜತೆ ಚರ್ಚೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಗರ, ಗ್ರಾಮೀಣ ಕ್ಷೇತ್ರಗಳನ್ನೊಳಗೊಂಡಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್-ಬಿಜೆಪಿಯ ಮತ ಗಳಿಕೆಯ ಲೆಕ್ಕಾಚಾರವನ್ನು ಅಮಿತ್ ಶಾರವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಮಂಜುನಾಥ್ ಅವರ ಸ್ಪರ್ಧೆಯ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಂದಲೂ ಅಭಿಪ್ರಾಯ ಸಂಗ್ರಹಿಸಲಾಗಿತ್ತು. ಇದೇ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಭೇಟಿಯಾಗಿ ಚರ್ಚಿಸಿದ್ದರು.
ಈ ಎಲ್ಲ ಬೆಳವಣಿಗೆ ಹಿನ್ನೆಲೆಯಲ್ಲಿ ಡಾ.ಮಂಜುನಾಥ್‌ರವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂಬುದು ತೀವ್ರ ಕುತೂಹಲಕ್ಕೆಡೆ ಮಾಡಿಕೊಟ್ಟಿದೆ.