ಇತರೆ

ಅಡಿಕೆ ತೋಟದ ನೀರಿನ ತೊಟ್ಟಿಯಲ್ಲಿ ಇಬ್ಬರು ಕಾರ್ಮಿಕರ ಶವ ಪತ್ತೆ, ಪೊಲೀಸರಿಂದ ಚುರುಕುಗೊಂಡ ತನಿಖೆ 

Views: 37

ಕನ್ನಡ ಕರಾವಳಿ ಸುದ್ದಿ: ಅಡಿಕೆ ತೋಟದ ಮನೆಯ ನೀರಿನ ತೊಟ್ಟಿಯಲ್ಲಿ ಇಬ್ಬರು ಕಾರ್ಮಿಕರ ಮೃತದೇಹಗಳು ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಆನಂದ್ (48) ಹಾಗೂ ಜುಂಜಾನಾಯ್ (65) ಎಂದು ಗುರುತಿಸಲಾಗಿದೆ.

ಅಮೃತಾಪುರ ಗ್ರಾಮದ ಮುರುಗೇಶ್ ಅವರಿಗೆ ಸೇರಿದ ಅಡಿಕೆ ತೋಟದಲ್ಲಿ ಅಡಿಕೆ ಸುಲಿಯುವ ಕೆಲಸಕ್ಕಾಗಿ ಸೋಮವಾರ ಬೆಳಗ್ಗೆ ಇಬ್ಬರೂ ಕಾರ್ಮಿಕರು ತೆರಳಿದ್ದರು. ಆದರೆ, ಕೆಲ ಸಮಯದ ಬಳಿಕ ತೋಟದ ಮನೆಯ ನೀರಿನ ತೊಟ್ಟಿಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿರುವುದು ಗ್ರಾಮದಲ್ಲಿ ಆತಂಕ ಹಾಗೂ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಕೆಲಸಕ್ಕೆ ತೆರಳಿದ್ದ ಇಬ್ಬರೂ ಆಕಸ್ಮಿಕವಾಗಿ ಕಾಲು ಜಾರಿ ನೀರಿನ ತೊಟ್ಟಿಗೆ ಬಿದ್ದಿದ್ದಾರೆಯೇ? ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ? ಇಲ್ಲವೇ ಇದರ ಹಿಂದೆ ಯಾವುದಾದರೂ ದುಷ್ಕೃತ್ಯ ಅಡಗಿದೆಯೇ ಎಂಬುದು ಇನ್ನೂ ತಿಳಿದುಬಂದಿಲ್ಲ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ತರೀಕೆರೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತರೀಕೆರೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಇಬ್ಬರು ಕಾರ್ಮಿಕರ ಸಾವಿಗೆ ನಿಖರ ಕಾರಣವೇನು ಎಂಬುದು ಮರಣೋತ್ತರ ಪರೀಕ್ಷೆ ಹಾಗೂ ಪೊಲೀಸ್ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ. ಈ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣದ ತನಿಖೆ ಮುಂದುವರಿದಿದೆ.

Related Articles

Back to top button
error: Content is protected !!