ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ; 11 ನವಜಾತ ಶಿಶುಗಳು ಸಾವು, 16 ಶಿಶುಗಳ ಸ್ಥಿತಿ ಗಂಭೀರ

Views: 100
ಉತ್ತರ ಪ್ರದೇಶ: ಝಾನ್ಸಿ ಜಿಲ್ಲೆಯ ಸ್ಥಳೀಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್ನಲ್ಲಿ ಶುಕ್ರವಾರ ತಡರಾತ್ರಿ ಭಾರಿ ಅಗ್ನಿ ಅವಘಡದಲ್ಲಿ 11 ನವಜಾತ ಶಿಶುಗಳು ಸುಟ್ಟು ಕರಕಲಾಗಿವೆ.
ಮಕ್ಕಳ ವಾರ್ಡ್ನ ಕಿಟಕಿ ಒಡೆದು ಹಲವು ಶಿಶುಗಳನ್ನು ರಕ್ಷಿಸಲಾಗಿದೆ.
ಜಿಲ್ಲಾಧಿಕಾರಿ ಸೇರಿದಂತೆ ಆಡಳಿತದ ಹಲವು ಉನ್ನತ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಹಲವು ಪೊಲೀಸ್ ಠಾಣೆಗಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ.
ಇನ್ನು ಆಸ್ಪತ್ರೆಯಲ್ಲಿ ಮೌನ ಆವರಿಸಿದೆ. ತಮ್ಮ ಮಕ್ಕಳನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ಅಪಘಾತದ ಸಮಯದಲ್ಲಿ ಸುಮಾರು 54 ನವಜಾತ ಮಕ್ಕಳನ್ನು NICU ವಾರ್ಡ್ನಲ್ಲಿ ದಾಖಲಿಸಲಾಗಿತ್ತು.
ಈ ಬಗ್ಗೆ ಪ್ರತಿಕ್ರಿಸಿರುವ ಜಿಲ್ಲಾಧಿಕಾರಿ ಅವಿನಾಶ್ ಕುಮಾರ್, ಪ್ರಾಥಮಿಕವಾಗಿ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣವೆಂದು ಶಂಕಿಸಲಾಗಿದೆ. ಈ ಅವಘಡದಲ್ಲಿ 11 ಮಕ್ಕಳು ಸಾವನ್ನಪ್ಪಿದ್ದಾರೆ. ಸುಮಾರು 40 ಶಿಶುಗಳನ್ನು ಉಳಿಸಲಾಗಿದೆ. ಈ ಪೈಕಿ 16ಕ್ಕೂ ಹೆಚ್ಚು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ನಿಗಾ ವಹಿಸಲಾಗಿದೆ. ವೈದ್ಯಕೀಯ ಕಾಲೇಜಿನಲ್ಲಿ ದಾಖಲಾದ ಮಕ್ಕಳ ವಯಸ್ಸು ಒಂದು ದಿನದಿಂದ ಒಂದು ತಿಂಗಳವರೆಗೆ ಇದೆ ಎಂದು ಹೇಳಿದರು.
ರಾತ್ರಿ 10ರಿಂದ 10.30ರ ನಡುವೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ವಾರ್ಡ್ನಲ್ಲಿ ಹೊಗೆ ಬರುತ್ತಿರುವುದನ್ನು ನೋಡಿದ ಜನರು ಎಲ್ಲರನ್ನು ಎಚ್ಚರಿಸಿದ್ದಾರೆ. ಇದು ಏನೆಂಬುದು ಅರ್ಥವಾಗುವಷ್ಟರಲ್ಲಿ ಬೆಂಕಿ ಹರಡಿತು. ಹೆಚ್ಚಿನ ಮಕ್ಕಳು ಹೊಗೆ ಮತ್ತು ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.






