ಇಂದು ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ, ಅಲರ್ಟ್ ಘೋಷಣೆ
Views: 48
ಕನ್ನಡ ಕರಾವಳಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ 8 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ ಮಾಡಿದೆ.
ಮುಂಗಾರು ಪೂರ್ವ ಮಳೆ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಮೈಸೂರು, ರಾಮನಗರ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ಭಾಗಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಗುಡುಗು ಸಹಿತ ಮಳೆಯಾಗಲಿದೆ. ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ
ಬಳ್ಳಾರಿ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲೂ ಗಾಳಿ ಸಹಿತ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯ ಕೆಲವು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಗದಗ, ಕೊಪ್ಪಳ, ಧಾರವಾಡ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.
ನೈಋತ್ಯ ಮುಂಗಾರು ಪ್ರವೇಶಿಸಲು ಸಜ್ಜು: ಕೇರಳಕ್ಕೆ ನೈಋತ್ಯ ಮುಂಗಾರು ಪ್ರವೇಶಿಸಲು ಸಜ್ಜಾಗಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಮುಂಗಾರು ರಾಜ್ಯಕ್ಕೆ ಕಾಲಿಡಲಿದೆ ಎಂದು ಹವಾಮಾನ ಇಲಾಖೆ ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡಿದೆ.
ನೈಋತ್ಯ ಮುಂಗಾರು ಪ್ರಸ್ತುತ ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯ ಹಲವು ಭಾಗಗಳಲ್ಲಿ ಮುನ್ನಡೆಯುತ್ತಿದೆ. ಮುಂದಿನ ಕೆಲವು ದಿನಗಳಲ್ಲಿ ಲಕ್ಷದ್ವೀಪ, ಕೇರಳ ಮತ್ತು ತಮಿಳುನಾಡಿನ ಕೆಲವು ಭಾಗಗಳಿಗೆ ಮುಂಗಾರು ಮಾರುತಗಳು ಪ್ರವೇಶಿಸಲಿವೆ. ಈ ಸಂದರ್ಭ ಮತ್ತು ಬಂಗಾಳಕೊಲ್ಲಿಯ ಮೇಲಿರುವ ವಾಯು ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದಾಗಿ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ.
ಕರಾವಳಿಯಲ್ಲಿ ವರುಣನ ಅಬ್ಬರ
ಜೂನ್ 6 ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ. ವಿಶೇಷವಾಗಿ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜೂನ್ 3 ರಿಂದ ಜೂನ್ 6 ರವರೆಗೆ ‘ಭಾರೀ ಮಳೆ’ ಯಾಗುವ ಮುನ್ಸೂಚನೆ ಇದೆ.






