ಇಂದು ರಾಜ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಘೋಷಣೆಗೆ ಕ್ಷಣಗಣನೆ
Views: 12
ಕನ್ನಡ ಕರಾವಳಿ ಸುದ್ದಿ: ಇಂದು ರಾಜ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಮುಂದಿನ ಮುಖ್ಯಮಂತ್ರಿಯ ಆಯ್ಕೆ ನಡೆಯಲಿದೆ.
ಶನಿವಾರ ಸಂಜೆ 4 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಲಿದೆ ಎಂದು ಶಾಸಕಾಂಗ ಪಕ್ಷದ ಕಾರ್ಯದರ್ಶಿ ಅಲ್ಲಮಪ್ರಭು ಪಾಟೀಲ್ ಅವರು ಎಲ್ಲಾ ಶಾಸಕರಿಗೆ ಕಳುಹಿಸಿದ ಪತ್ರದಲ್ಲಿ ತಿಳಿಸಿದ್ದಾರೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ಶುಕ್ರವಾರ ಅಂಗೀಕರಿಸಿ, ಸಚಿವ ಸಂಪುಟವನ್ನು ವಿಸರ್ಜಿಸಿದ್ದರು. ನಂತರ ಈ ಸಭೆಯನ್ನು ನಿಗದಿಯಾಗಿದೆ.
ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಉಪ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಡಿ.ಕೆ.ಶಿವಕುಮಾರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಹೊಸ ನಾಯಕನನ್ನಾಗಿ ಇಂದು ಆಯ್ಕೆ ಮಾಡುವ ನಿರೀಕ್ಷೆಯಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ವಿಧಾನ ಪರಿಷತ್ ಸಭಾ ನಾಯಕ ಎನ್.ಎಸ್. ಬೋಸರಾಜು ಮತ್ತು ಪಕ್ಷದ ಎಲ್ಲಾ ಕಾರ್ಯಾಧ್ಯಕ್ಷರು ಭಾಗವಹಿಸಲಿದ್ದಾರೆ.. ಶಾಸಕರೆಲ್ಲರೂ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸುವುದು ಕಡ್ಡಾಯ ಎಂದು ಪತ್ರದಲ್ಲಿ ಸೂಚಿಸಲಾಗಿದೆ.
ಹೈಕಮಾಂಡ್ ಸೂಚನೆ ಮೇರೆಗೆ ಗುರುವಾರ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಬಳಿಕ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಇಬ್ಬರೂ ದೆಹಲಿಗೆ ತೆರಳಿದ್ದರು. ಶುಕ್ರವಾರ ಇಬ್ಬರೂ ನಾಯಕರು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ, ಅಧಿಕಾರ ವರ್ಗಾವಣೆ ಮತ್ತು ಹೊಸ ಸಚಿವ ಸಂಪುಟ ರಚನೆ ಕುರಿತು ಚರ್ಚಿಸಿ ಬಂದಿದ್ದಾರೆ.
ಶಾಸಕಾಂಗ ಪಕ್ಷದ ಸಭೆ ಬಳಿಕ ಮುಂದಿನ ಮುಖ್ಯಮಂತ್ರಿ ಯಾರೆಂಬುದು ಅಧಿಕೃತವಾಗಿ ಘೋಷಣೆಯಾಗುವ ಸಾಧ್ಯತೆಯಿದೆ. ರಾಜ್ಯದಲ್ಲಿ ಮೊದಲಿನಿಂದಲೂ ಚರ್ಚೆಯಾಗುತ್ತಿರುವಂತೆ ಬಹುತೇಕ ಡಿ.ಕೆ.ಶಿವಕುಮಾರ್ ಅವರೇ ಸಿಎಂ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.






