ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ದೂರು
Views: 68
ಕನ್ನಡ ಕರಾವಳಿ ಸುದ್ದಿ: ಉಡುಪಿಯಲ್ಲಿ ನಡೆದ ಬಿಜೆಪಿಯ ಪ್ರತಿಭಟನೆಯಲ್ಲಿ ನಟ ಪ್ರಕಾಶ್ ರಾಜ್ ಅವರ ಜೀವಕ್ಕೆ ಅಪಾಯಕಾರಿಯಾಗುವಂತಹ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ಅಕ್ಷೇಪಾರ್ಹ ಹಾಗೂ ಮಾನಹಾನಿಕರ, ಪ್ರಚೋದನಕಾರಿ ಹೇಳಿಕೆ ನೀಡಿದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಕೋಟ ನಾಗೇಂದ್ರ ಪುತ್ರನ್ ಅವರು ಕೋಟ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಈ ಹೇಳಿಕೆಗೆ ಸಂಬಂಧಿಸಿದ ಸುದ್ದಿ ಹಾಗೂ ವಿಡಿಯೋವನ್ನು ಕೂಲಂಕಷವಾಗಿ ಪರಿಶೀಲಿಸಿ ಶಾಸಕರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ನಟ ಪ್ರಕಾಶ್‌ರಾಜ್‌ಗೆ ಅಗತ್ಯವಿದ್ದಲ್ಲಿ ಸೂಕ್ತ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲಿಸಬೇಕು. ತನಿಖೆಯನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಆರೋಪಿತರು ಹೊಂದಿರುವ ಯಾವುದೇ ರಾಜಕೀಯ ಹುದ್ದೆ ಅಥವಾ ಪ್ರಭಾವವನ್ನು ಪರಿಗಣಿಸದೆ, ನಿಷ್ಪಕ್ಷಪಾತ, ಪಾರದರ್ಶಕ ಮತ್ತು ಶೀಘ್ರ ತನಿಖೆ ನಡೆಸಬೇಕು ಎಂದು ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.






