ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಜೂನ್ 3ರಂದು ಪ್ರಮಾಣವಚನ
Views: 7
ಕನ್ನಡ ಕರಾವಳಿ ಸುದ್ದಿ: ತೀವ್ರ ಕುತೂಹಲ ಮೂಡಿಸಿದ್ದ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ತೆರೆ ಎಳೆದಿದ್ದು, ರಾಜ್ಯದ ನೂತನ ಮತ್ತು 25ನೇ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಹಾಗೂ ಹಾಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜೂನ್ 3ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ.
ಸಿದ್ದರಾಮಯ್ಯ ಅವರ ರಾಜೀನಾಮೆ ಬೆನ್ನಲ್ಲೇ ಸೃಷ್ಟಿಯಾಗಿದ್ದ ನಾಯಕತ್ವದ ಗೊಂದಲಗಳಿಗೆ ದೆಹಲಿ ಮಟ್ಟದಲ್ಲಿ ನಡೆದ ಸುದೀರ್ಘ ಸಂಧಾನ ಸಭೆಗಳಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗಿ ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇನ್ನು ಇಂದು ಸಂಜೆ ನಡೆಯುವ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆಯಲ್ಲಿ ಕೂಡ ಡಿ.ಕೆ. ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗುವುದು ಎಂದು ಹೇಳಲಾಗುತ್ತಿದೆ.
ಸಿಎಲ್‌ಪಿ ಸಭೆಯ ನಿರ್ಣಯದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಅವರು ಹಿರಿಯ ನಾಯಕರೊಂದಿಗೆ ರಾಜ್‌ಭವನಕ್ಕೆ ತೆರಳಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಲಿದ್ದಾರೆ. ಶಾಸಕರ ಬೆಂಬಲ ಪತ್ರವನ್ನು ಹಸ್ತಾಂತರಿಸಿ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಜೂನ್ 3ರ ಬುಧವಾರದಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣ ಅಥವಾ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗದಲ್ಲಿ ಅದ್ಧೂರಿ ಪ್ರಮಾಣವಚನ ಸಮಾರಂಭ ಆಯೋಜಿಸಲು ಸಿದ್ಧತೆಗಳು ನಡೆದಿವೆ ಎಂದು ವರದಿಯಾಗಿದೆ.
ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ದೇಶದ ವಿವಿಧ ರಾಜ್ಯಗಳ ಇಂಡಿ ಒಕ್ಕೂಟದ ಪ್ರಮುಖ ನಾಯಕರು ಆಗಮಿಸಲಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರು, ಡಿ.ಕೆ. ಶಿವಕುಮಾರ್ ಅವರಿಗೆ ಪೂರ್ಣ ಬೆಂಬಲ ಘೋಷಿಸಿದ್ದಾರೆ.






