ಇತರೆ

ಕಲಬುರಗಿ: ಕರ್ತವ್ಯದಲ್ಲಿದ್ದ ಸಶಸ್ತ್ರ ಮೀಸಲು ಪೊಲೀಸ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ 

Views: 35

ಕನ್ನಡ ಕರಾವಳಿ ಸುದ್ದಿ: ಕರ್ತವ್ಯದಲ್ಲಿದ್ದ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಪೊಲೀಸ್ ಕಾನ್ಸ್‌ಟೇಬಲ್ ತಮ್ಮ ಸೇವಾ ರೈಫಲ್‌ನಿಂದಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಜೇವರ್ಗಿ ತಾಲೂಕಿನ ಮಾವನೂರ ಗ್ರಾಮದ ಶಿವಕುಮಾರ ನರಿಬೋಳ (32) ಮೃತ ಕಾನ್ಸ್‌ಟೇಬಲ್ ಎಂದು ಗುರುತಿಸಲಾಗಿದೆ.

ಮಂಗಳವಾರ ರಾತ್ರಿ ಸುಮಾರು 9 ಗಂಟೆ ವೇಳೆಗೆ ಜಗತ್ ವೃತ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಕುಮಾರ, ಪೊಲೀಸ್ ವಾಹನದಲ್ಲಿ ಕುಳಿತಿದ್ದ ವೇಳೆ ತಮ್ಮ ಬಳಿಯಿದ್ದ ಸರ್ಕಾರಿ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.

ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ., ಡಿಸಿಪಿಗಳಾದ ಶಾಲೂ ಹಾಗೂ ಪ್ರವೀಣ ನಾಯಕ, ಎಸಿಪಿ ಶರಣಬಸಪ್ಪ ಸುಬೇದಾರ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೋಕೋ, ವಿಧಿವಿಜ್ಞಾನ ಮತ್ತು ಬ್ಯಾಲಿಸ್ಟಿಕ್ ತಂಡಗಳು ಸ್ಥಳ ಪರಿಶೀಲನೆ ನಡೆಸಿ ಸಾಕ್ಷ್ಯ ಸಂಗ್ರಹಿಸಿವೆ.

2016ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದ ಶಿವಕುಮಾರ ಅವರು ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ನಂತರ ಜಿಲ್ಲಾ ವರ್ಗಾವಣೆಯ ಮೂಲಕ 2026ರ ಫೆಬ್ರುವರಿಯಲ್ಲಿ ಕಲಬುರಗಿ ನಗರ ಪೊಲೀಸ್ ಕಮಿಷನರೇಟ್‌ಗೆ ವರ್ಗಾವಣೆಯಾಗಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ., “ಸಿಎಆರ್ ಕಾನ್ಸ್‌ಟೇಬಲ್ ಶಿವಕುಮಾರ ಅವರು ತಮ್ಮ ಸೇವಾ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕಳೆದ ಕೆಲವು ದಿನಗಳಿಂದ ವೈಯಕ್ತಿಕ ಕಾರಣಗಳಿಂದ ಮಾನಸಿಕವಾಗಿ ನೊಂದಿದ್ದರು ಎಂದು ತಿಳಿದುಬಂದಿದೆ. ಕುಟುಂಬದವರು ನೀಡುವ ದೂರು ಆಧರಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

Related Articles

Back to top button
error: Content is protected !!