ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ದೈಹಿಕ ಶಿಕ್ಷಕನಿಗೆ 5 ವರ್ಷ ಜೈಲು ಶಿಕ್ಷೆ
Views: 49
ಕನ್ನಡ ಕರಾವಳಿ ಸುದ್ದಿ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಮತ್ತು ನೊಂದ ಬಾಲಕಿಗೆ 20 ಸಾವಿರ ರೂ.ದಂಡ ವಿಧಿಸಲಾಗಿದೆ.
ಪುತ್ತೂರಿನ ಖಾಸಗಿ ಕಾಲೇಜೊಂದರ ದೈಹಿಕ ಶಿಕ್ಷಕನಾಗಿದ್ದು ಅದೇ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾದ ಸಂತ್ರಸ್ತೆ ಅಪ್ರಾಪ್ತ ಬಾಲಕಿಯು ಕ್ರೀಡಾ ಅಭ್ಯಾಸಕ್ಕೆ ಬಂದು ಜಿಮ್ ಕೊಠಡಿಯ ವರಾಂಡದಲ್ಲಿ ನಿಂತುಕೊಂಡಿದ್ದ ಸಮಯ ಆಕೆಗೆ ಲೈಂಗಿಕ ಶೋಷಣೆ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿತ್ತು.
ಮಹಿಳಾ ಠಾಣಾ ಪೊಲೀಸರು ಕೇಸ್ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯ ಪ್ರಕರಣದಲ್ಲಿ 19 ಸಾಕ್ಷಿಗಳನ್ನು ವಿಚಾರಿಸಿದೆ. ದ.ಕ.ಮಹಿಳಾ ಪೊಲೀಸ್ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕರವರು ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಧೀಶೆ ಸರಿತಾ ಡಿ. ಅವರು ಇತ್ತಂಡಗಳ ವಾದ ಆಲಿಸಿ ಆರೋಪಿಗೆ ಪೋಕ್ಸೋ ಕಾಯ್ದೆ ಕಲಂ 10 ರಡಿ ಅಪರಾಧಕ್ಕೆ 5 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು ರೂ.20 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ 6 ತಿಂಗಳ ಸಾದಾ ಶಿಕ್ಷೆ ಭಾ.ದಂ.ಸಂ. ಕಲಂ 354(ಎ) ರಡಿ ಅಪರಾಧಕ್ಕೆ 3 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು ರೂ.10 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ 3 ತಿಂಗಳ ಸಾದಾ ಶಿಕ್ಷೆ ವಿಧಿಸಿರುತ್ತಾರೆ. ದಂಡದ ಮೊತ್ತದಲ್ಲಿ ರೂ. 20 ಸಾವಿರ ರೂ.ಗಳನ್ನು ನೊಂದ ಬಾಲಕಿಗೆ ನೀಡಲು ಆದೇಶಿಸಲಾಗಿದೆ. ನೊಂದ ಬಾಲಕಿಯಾದ ಪ್ರಾ.ಸಾ.1 ರವರಿಗೆ 20,000/- ವನ್ನು ನೀಡಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನ್ಯಾಯಾಲಯ ಆದೇಶಿಸಿದೆ.






