ಕುಂದಾಪುರ :ಬಸ್ರೂರು ಪ್ರೌಢಶಾಲಾ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ
Views: 225
ಕನ್ನಡ ಕರಾವಳಿ ಸುದ್ದಿ: ಬಸ್ರೂರು ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ವರ್ಷದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಮೃತಪಟ್ಟ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಬಸ್ರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದ ಫಾತಿಮಾ ಅಕ್ಸಾ (15) ಎಂದು ಗುರುತಿಸಲಾಗಿದೆ. ಈಕೆ ತನ್ನ ತಂದೆ ವೈ. ಫೈರೋಜ್, ತಾಯಿ ಅಮ್ರೀನ್ ಹಾಗೂ ಇಬ್ಬರು ಸಹೋದರಿಯರೊಂದಿಗೆ ಬಸ್ರೂರು ಗ್ರಾಮದ ನಿರೋಣಿ ಪ್ರದೇಶದಲ್ಲಿರುವ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು.
ಮಧ್ಯಾವಧಿ ಪರೀಕ್ಷೆಯಲ್ಲಿ ನಾಲ್ಕು ವಿಷಯಗಳಲ್ಲಿ ಅನುತ್ತೀರ್ಣಳಾಗಿದ್ದ ಫಾತಿಮಾ ಅಕ್ಸಾ, ಅಕ್ಟೋಬರ್ 30ರಂದು ಶಾಲೆಯಲ್ಲಿ ನಿಗದಿಯಾಗಿದ್ದ ಪೋಷಕರ ಸಭೆಯ ವಿಚಾರವಾಗಿ ಮನನೊಂದಿದ್ದಳು ಎನ್ನಲಾಗಿದೆ. ಸಭೆಗೆ ಹಾಜರಾಗಲು ತಾಯಿ ನಿರಾಕರಿಸಿದ್ದರಿಂದ ಬೇಸರಗೊಂಡ ವಿದ್ಯಾರ್ಥಿನಿ ಮನೆಯ ಕೋಣೆಯೊಳಗೆ ತೆರಳಿ ಬಾಗಿಲು ಹಾಕಿಕೊಂಡಿದ್ದಳು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸ್ವಲ್ಪ ಸಮಯದ ಬಳಿಕ ವಿದ್ಯಾರ್ಥಿನಿ ಶಾಲೆಗೆ ತೆರಳದಿರುವುದನ್ನು ಗಮನಿಸಿದ ತಂದೆ, ಕೋಣೆಯ ಬಾಗಿಲು ತೆರೆದು ನೋಡಿದಾಗ ಫ್ಯಾನ್ನ ರಾಡಿಗೆ ನೈಲಾನ್ ಶಾಲ್ನಿಂದ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ತಕ್ಷಣ ಆಕೆಯನ್ನು ಕಾರಿನಲ್ಲಿ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷಿಸಿದ ವೈದ್ಯರು ಬೆಳಿಗ್ಗೆ 9.30ಕ್ಕೆ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






