ಕೆಪಿಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸುವ ಸುಳಿವು ನೀಡಿದ ಡಿಕೆಶಿ ನಡೆ ನಿಗೂಢ..!
Views: 82
ಕನ್ನಡ ಕರಾವಳಿ ಸುದ್ದಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸುವ ಸುಳಿವು ನೀಡಿದ್ದಾರೆ.
ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ಬುಧವಾರ ನಡೆದ ಇಂದಿರಾ ಗಾಂಧಿ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಮಾತನಾಡಿದರು. ಇನ್ನು ಹೆಚ್ಚು ದಿನ ಅಧ್ಯಕ್ಷ ಸ್ಥಾನದಲ್ಲಿ ಇರಲು ಸಾಧ್ಯವಿಲ್ಲ ಎನ್ನುವ ಮಾತನಾಡಿರುವ ಅವರು, ನಂತರ, ಹೈಕಮಾಂಡ್ ಹೇಳುವಷ್ಟು ದಿನ ಜವಾಬ್ದಾರಿ ನಿಭಾಯಿಸುವುದಾಗಿಯೂ ತಿಳಿಸಿದ್ದಾರೆ.
“ನಾನು ಈ ಹುದ್ದೆಯಲ್ಲಿ ಶಾಶ್ವತವಾಗಿ ಇರಲು ಸಾಧ್ಯವಿಲ್ಲ. ಈಗಾಗಲೇ ಐದೂವರೆ ವರ್ಷವಾಗಿದೆ, ಮಾರ್ಚ್ ಬಂದರೆ ಆರು ವರ್ಷವಾಗಲಿದೆ. ಬೇರೆಯವರಿಗೆ ಅವಕಾಶ ನೀಡಬೇಕು. ನಾನು ನಾಯಕತ್ವದಲ್ಲಿ ಇರುತ್ತೇನೆ, ತಲೆಕೆಡಿಸಿಕೊಳ್ಳಬೇಡಿ. ನಾನು ಉಪಮುಖ್ಯಮಂತ್ರಿಯಾದ ದಿನವೇ ಈ ಹುದ್ದೆ ಬಿಡಬೇಕು ಎಂದು ನಿರ್ಧರಿಸಿದ್ದೆ. ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರು ಇನ್ನು ಸ್ವಲ್ಪ ದಿನ ಮುಂದುವರಿಯಲು ಹೇಳಿದ್ದಾರೆ. ನಾನು ನನ್ನ ಕರ್ತವ್ಯ ನಿಭಾಯಿಸುತ್ತಿದ್ದೇನೆ” ಎಂದು ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಮುಂದುವರಿಯುವ ಬಗ್ಗೆ ಕೇಳಿದಾಗ, “ಪಕ್ಷ ಏನು ಹೇಳುತ್ತದೆಯೋ ಅದನ್ನು ನಾನು ಪಾಲಿಸುತ್ತೇನೆ. ಪಕ್ಷದ ಅದ್ಯಕ್ಷರಾದವರು ಹೇಗೆ ಕೆಲಸ ಮಾಡಬೇಕು ಎಂದು ನಾನು ಉದಾಹರಣೆಯಾಗಬೇಕು, ಪಕ್ಷದಲ್ಲಿ ನಮ್ಮ ಗುರುತು ಬಿಟ್ಟು ಹೋಗಬೇಕು. ನಾನು ಈ ವಿಚಾರವಾಗಿ ಮಾತನಾಡುತ್ತಿದ್ದೇನೆ ಹೊರತು, ತ್ಯಾಗ ಅಥವಾ ಓಡಿ ಹೋಗುವ ಬಗ್ಗೆ ಮಾತನಾಡುತ್ತಿಲ್ಲ. ನಾನು ಓಡಿ ಹೋಗುವ ಮನುಷ್ಯನಲ್ಲ. ಗಾಂಧಿ ಕುಟುಂಬ ಹಾಗೂ ಕಾಂಗ್ರೆಸ್ ಅಧ್ಯಕ್ಷರು ಎಲ್ಲಿಯವರೆಗೂ ಜವಾಬ್ದಾರಿ ನಿಭಾಯಿಸಲು ಸೂಚಿಸುತ್ತಾರೋ ಅಲ್ಲಿಯವರೆಗೂ ನಾನು ಕರ್ತವ್ಯ ನಿಭಾಯಿಸುತ್ತೇನೆ” ಎಂದರು.






