ರಾಜಕೀಯ

ಕೆ.ಜಯಪ್ರಕಾಶ್ ಹೆಗ್ಡೆಯವರಿಗೆ ಸಚಿವ ಸ್ಥಾನ ನೀಡಿ; ಜಿಲ್ಲಾ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ ಆಗ್ರಹ

Views: 47

ಕನ್ನಡ ಕರಾವಳಿ ಸುದ್ದಿ: ಚುನಾವಣೆಯಲ್ಲಿ ಸೋಲಲಿ, ಗೆಲ್ಲಲಿ ಜನಸಾಮಾನ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸುವಲ್ಲಿ ಶ್ರಮಿಸುತ್ತಿರುವ ಮಾಜಿ ಸಚಿವ ಹಾಗೂ ಮಾಜಿ ಸಂಸದರಾದ ಕೆ ಜಯಪ್ರಕಾಶ್ ಹೆಗ್ಡೆ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ ವಿಕಾಸ್ ಹೆಗ್ಡೆ ಆಗ್ರಹಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೆ. ಜಯಪ್ರಕಾಶ್ ಹೆಗ್ಡೆ ಅವರು ಕಾರ್ಯಕರ್ತರ ನಂಬಿಕೆಯ ನಾಯಕರು, ಅಭಿವೃದ್ಧಿ ಚಿಂತನೆಯ ಕನಸುಗಾರರು ಹಾಗೂ ಆ ಕನಸುಗಳನ್ನು ಯೋಜನೆಗಳಾಗಿ ಪರಿವರ್ತಿಸಿ ಕಾರ್ಯರೂಪಕ್ಕೆ ತರುವ ಸಾಮರ್ಥ್ಯ ಹೊಂದಿರುವ ಜನನಾಯಕರು ಎಂದು ಬಣ್ಣಿಸಿದ್ದಾರೆ.

ಹಗಲು-ರಾತ್ರಿ ಎನ್ನದೆ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸುವಲ್ಲಿ ಸದಾ ಮುಂಚೂಣಿಯಲ್ಲಿರುವ ಅವರು, ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದು, ಕರಾವಳಿ ಭಾಗದ ಅಭಿವೃದ್ಧಿಯ ಹರಿಕಾರರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಅಧಿಕಾರದಲ್ಲಿರಲಿ ಅಥವಾ ಅಧಿಕಾರದ ಹೊರಗಿರಲಿ, ಜನರ ನೋವು-ನಲಿವುಗಳಿಗೆ ಸ್ಪಂದಿಸುವ ಗುಣ ಹೊಂದಿರುವ ಜಯಪ್ರಕಾಶ್ ಹೆಗ್ಡೆ ಅವರು ಸಿಕ್ಕ ಅವಕಾಶಗಳನ್ನು ಜನಪರವಾಗಿ ಮತ್ತು ಸಮರ್ಥವಾಗಿ ನಿರ್ವಹಿಸಿದ್ದಾರೆ. ಆದ್ದರಿಂದ ಈ ಬಾರಿ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ ಸಚಿವ ಸಂಪುಟದಲ್ಲಿ ಸ್ಥಾನ ನೀಡುವ ಜೊತೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಬೇಕು ಎಂದು ವಿಕಾಸ್ ಹೆಗ್ಡೆ ಒತ್ತಾಯಿಸಿದ್ದಾರೆ.

Related Articles

Back to top button
error: Content is protected !!