ಕೊಲ್ಲೂರು: ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕದ್ದ ಆರೋಪಿ ಬಂಧನ
Views: 129
ಕನ್ನಡ ಕರಾವಳಿ ಸುದ್ದಿ: ಕೊಲ್ಲೂರು ಗ್ರಾಮದ ದಳಿ ಎಂಬಲ್ಲಿ ಮೇ 17ರಂದು ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೇರಳದ ಮಹಿಳೆಯ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕೊಲ್ಲೂರು ಗ್ರಾಮದ ನಿವಾಸಿ ಹೇಮಂತ (40) ಎಂದು ಗುರುತಿಸಲಾಗಿದೆ. ಅಪಘಾತದ ಘಟನಾ ಸ್ಥಳದಲ್ಲಿ ಮೃತಪಟ್ಟಿದ್ದ ಮಹಿಳೆಯೊಬ್ಬರ ಮೈಮೇಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಲಾಗಿತ್ತು.
ಈ ಕುರಿತು ಶ್ರೀಕುಮಾರ ಎಂಬುವರು ನೀಡಿದ ದೂರಿನ ಮೇರೆಗೆ ಕೊಲ್ಲೂರು ಠಾಣೆ ಪೊಲೀಸರು ಅಪರಾಧ ಕ್ರಮಾಂಕ 38/2026, ಕಲಂ 303(2) ಬಿಎನ್‌ಎಸ್ ಅಡಿಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.
ಸಿಸಿಟಿವಿ ದೃಶ್ಯಾವಳಿ, ಸಾರ್ವಜನಿಕರು ಸ್ಥಳದಲ್ಲಿ ತೆಗೆದಿದ್ದ ವಿವಿಧ ಛಾಯಾಚಿತ್ರಗಳು ಹಾಗೂ ತಾಂತ್ರಿಕ ಮಾಹಿತಿಯ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಪ್ರಕರಣ ದಾಖಲಾದ 24 ಗಂಟೆಯೊಳಗೆ ಪತ್ತೆ ಹಚ್ಚಿ ಬಂಧಿಸಿದ್ದಾರೆ.
ಆರೋಪಿಯಿಂದ 3.910 ಗ್ರಾಂ ತೂಕದ ಉಂಗುರ (ಅಂದಾಜು ಮೌಲ್ಯ 57 ಸಾವಿರ ರೂ.), 3.450 ಗ್ರಾಂ ತೂಕದ ಬಳೆ (50 ಸಾವಿರ ರೂ.) ಹಾಗೂ 7.160 ಗ್ರಾಂ ತೂಕದ ಚಿನ್ನದ ಸರ (1 ಲಕ್ಷ ರೂ.) ಸೇರಿದಂತೆ ಒಟ್ಟು ಸುಮಾರು 2.07 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಹೆಚ್.ಡಿ. ಕುಲಕರ್ಣಿ ಹಾಗೂ ಬೈಂದೂರು ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕ ವಿನಯ ಎಂ. ಕೊರ್ಲಹಳ್ಳಿ ನೇತೃತ್ವದ ತಂಡ ತನಿಖೆ ಕೈಗೊಂಡಿದೆ.






