ಶಿಕ್ಷಣ

ಕೋಟೇಶ್ವರ ಸರಕಾರಿ ಪದವಿ ಕಾಲೇಜಿನಲ್ಲಿ “ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ”

Views: 108

ಕನ್ನಡ ಕರಾವಳಿ ಸುದ್ದಿ: ವಿದ್ಯಾರ್ಥಿಗಳು ಕಾಲೇಜು ಹಂತದಲ್ಲಿಯೇ ಹೆಚ್ಚು ಹೆಚ್ಚು ಓದುವ ಹವ್ಯಾಸವನ್ನು ರೂಢಿಸಿಕೊಂಡರೆ ಅಂತರಂಗದ ಬೆಳೆವಣಿಗೆಯೊಂದಿಗೆ ಸರ್ವಾಂಗೀಣ ವ್ಯಕ್ತಿತ್ವ ವಿಕಸನವಾಗುತ್ತದೆ. ಓದು ಧನಾತ್ಮಕ ಚಿಂತನೆಗೆ ಕಾರಣವಾಗಿ ಸ್ಮರಣ ಶಕ್ತಿ ಹೆಚ್ಚುವುದರೊಂದಿಗೆ ವ್ಯಕ್ತಿತ್ವಕ್ಕೆ ಮೆರುಗು ತರುತ್ತದೆ. ವಿದ್ಯಾರ್ಥಿಗಳು ಗ್ರಂಥಾಲಯದ ಬಳಕೆಯಿಂದ ಸಂವಹನ ಕೌಶಲ್ಯ, ಸೃಜನ ಶೀಲತೆ ಮತ್ತು ಭಾಷಾ ಪ್ರೌಡಿಮೆ ಹೊಂದಿ ಸರ್ವತೋಮುಖ ಬೆಳವಣಿಗೆ ಹೊಂದಬಹುದು ಎಂದು ಪೂರ್ಣಪ್ರಜ್ಞಾ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಡಾ. ಶ್ರೀಕಾಂತ್ ರಾವ್ ಸಿದ್ಧಾಪುರ ಹೇಳಿದರು.

ಅವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಕೇಂದ್ರದ ಜಂಟಿ ಆಶ್ರಯದಲ್ಲಿ ಡಾ. ಎಸ್.ಆರ್. ರಂಗನಾಥನ್‌ರವರ 133 ನೇ ಜನ್ಮ ದಿನದ ಅಂಗವಾಗಿ ಹಮ್ಮಿಕೊಂಡ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ವಹಿಸಿ, ಗ್ರಂಥಾಲಯ ಒಂದು ಶಿಕ್ಷಣ ಸಂಸ್ಥೆಯ ಹೃದಯವಿದ್ದಂತೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು. ಐಕ್ಯೂಎಸಿ ಸಂಚಾಲಕ ನಾಗರಾಜ ಯು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಂಥಪಾಲಕರಾದ ವೆಟರನ್ ರವಿಚಂದ್ರ ಹೆಚ್.ಎಸ್. ಕಾರ್ಯಕ್ರಮವನ್ನು ಸಂಘಟಿಸಿ ಅತಿಥಿಗಳನ್ನು ಸ್ವಾಗತಿಸಿದರು.

ಅಂತಿಮ ಬಿ.ಸಿ.ಎ. ಶಿಲ್ಪಾ ಮತ್ತು ತಂಡದವರು ಪ್ರಾರ್ಥಿಸಿದರು. ವಾಚನಾಲಯ ಸಮಿತಿಯ ವಿದ್ಯಾರ್ಥಿ ಪ್ರತಿನಿಧಿ ವಿದ್ಯಾ ಶೇಟ್ ನಿರೂಪಿಸಿದರು, ವೈಷ್ಣವಿ ವಂದಿಸಿದರು.

Related Articles

Back to top button