ಇತರೆ
ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ: ಭಟ್ಕಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
Views: 26
ಕನ್ನಡ ಕರಾವಳಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ತಲಾಂದದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ಬುಧವಾರ ತಡರಾತ್ರಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಗಣೇಶ ವಿಸರ್ಜನೆ ಮೆರವಣಿಗೆ ಸಾಗುವ ವೇಳೆ ಮಾರ್ಗ ಮಧ್ಯೆ ಗುಲ್ಕಿಯ ಇಸ್ಮಾಯಿಲ್ ಮಸೀದಿ ಮತ್ತು ಮದರಸಾ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಎರಡೂ ಕಡೆಯವರಿಂದ ಬಂದ ದೂರುಗಳ ಆಧಾರದ ಮೇಲೆ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ.
ಸ್ಥಳೀಯ ನಿವಾಸಿ ಅಬ್ದುಲ್ ಆಲಿಮ್ ಅವರು ನೀಡಿದ ದೂರಿನ ಪ್ರಕಾರ, ಗುಲ್ಕಿಯ ರೈಲ್ವೆ ನಿಲ್ದಾಣದ ರಸ್ತೆಯಲ್ಲಿರುವ ಇಸ್ಮಾಯಿಲ್ ಸುನ್ನಿ ಜಾಮಿಯಾ ಮಸೀದಿ ಮತ್ತು ತಾಜುಸುನ್ನಾ ಅರೇಬಿಕ್ ಮದರಸಾ ಮೇಲೆ ಕಲ್ಲುಗಳನ್ನು ಎಸೆಯಲಾಗಿದ್ದು, ಇದರಿಂದ ಎರಡು ಕಿಟಕಿ ಗಾಜುಗಳು ಜಖಂಗೊಂಡಿವೆ. ಇನ್ನು ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಗಣೇಶ ಮೆರವಣಿಗೆಯ ಮೇಲೂ ಕಲ್ಲು ತೂರಾಟ ನಡೆಸಲಾಗಿದೆ ಎಂದು ಆರೋಪಿಸಿ ಪ್ರತಿದೂರು ಕೂಡ ದಾಖಲಾಗಿದೆ.






