ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಆವಿಷ್ಕಾರ- 2025
Views: 249
ಕನ್ನಡ ಕರಾವಳಿ ಸುದ್ದಿ: ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಆವಿಷ್ಕಾರ- 2025 ವಿಜ್ಞಾನ ಮಾದರಿ ವಸ್ತು ಪ್ರದರ್ಶನದ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದ ವಿಜ್ಞಾನ ಮಾದರಿ ವಸ್ತು ಪ್ರದರ್ಶನವಿದ್ದ ಕಾರ್ಯಕ್ರಮವನ್ನು ಮಣಿಪಾಲದ ಬಯೋ ಇನ್ಕ್ಯುಬೇಟರ್ ವಿಭಾಗದ ಕಾರ್ಯನಿರ್ವಹಣಾ ಮುಖ್ಯಸ್ಥರಾದ ಶ್ರೀ ಕೃಷ್ಣ ಪಿ ಭಟ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ವರ್ತಮಾನದಲ್ಲಿ ನಾವು ನಾವಿನ್ಯತೆಗೆ ಹೆಚ್ಚು ಮಹತ್ವ ಕೊಡಬೇಕು. ತುರ್ತು ಸಮಸ್ಯೆಗಳಿಗೆ ನಾವು ಪರಿಹಾರ ಕಂಡುಕೊಳ್ಳುತ್ತಾ ಹೊಸ ಹೊಸ ಆವಿಷ್ಕಾರಗಳಿಗೆ ತೆರೆದುಕೊಂಡು ವೈಜ್ಞಾನಿಕ ದೃಷ್ಟಿಕೋನದಿಂದ ಹೆಜ್ಜೆಯನಿಡಬೇಕು ಎಂದರು.
ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಾಂಡ್ಯ ಎಜುಕೇಶನ್ ಟ್ರಸ್ಟ್ ನ ಜಂಟಿ ಕಾರ್ಯನಿರ್ವಾಹಕರಾದ ಶ್ರೀಮತಿ ಅನುಪಮಾ ಎಸ್ ಶೆಟ್ಟಿ ಅವರು ಕಾರ್ಯಕ್ರಮಕ್ಕೆ ಶುಭ ಕೋರಿದರು. ಬಾಂಡ್ಯ ಎಜುಕೇಶನ್ ಟ್ರಸ್ಟ್ ನ ಜಂಟಿ ನಿರ್ವಾಹಕರಾದ ಶ್ರೀ ಕೆ ಸುಭಾಶ್ಚಂದ್ರ ಶೆಟ್ಟಿಯವರು ಸಭೆಯಲ್ಲಿ ಉಪಸ್ಥಿತರಿದ್ದರು . ಪ್ರಾಂಶುಪಾಲರಾದ ಡಾ. ರೂಪಾ ಶಣೈ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಶುಭಕೋರಿದರು. ವಿದ್ಯಾರ್ಥಿ ಜೀವನ್ ಹಾಗೂ ತ್ರಿಶಾ ಕಾರ್ಯಕ್ರಮದ ಪ್ರಾಮುಖ್ಯತೆಯನ್ನು ತಿಳಿಸಿದರು. ವಿದ್ಯಾರ್ಥಿಗಳಾದ ಆರಾಧ್ಯ ಬಾಯರಿ ಮತ್ತು ರಕ್ಷಾ ಜಂಟಿಯಾಗಿ ಕಾರ್ಯಕ್ರಮ ನಿರ್ವಹಿಸಿ, ಸ್ವಾಗತಿಸಿ, ವಂದಿಸಿದರು.






