ಜನಮನ

ಗೃಹಲಕ್ಷ್ಮೀ, ಗೃಹ ಜ್ಯೋತಿ ಗ್ಯಾರಂಟಿ ಯೋಜನೆಗಳಿಗೆ ಹೊಸ ಅರ್ಜಿ ಸಲ್ಲಿಸಬೇಕಿಲ್ಲ, ಮರು ಪರಿಶೀಲನೆ ಮಾತ್ರ!

Views: 190

ಕನ್ನಡ ಕರಾವಳಿ ಸುದ್ದಿ: ಗೃಹಲಕ್ಷ್ಮೀ ಯೋಜನೆ ಹಾಗೂ ಗೃಹ ಜ್ಯೋತಿ ಯೋಜನೆಗೆ ಹೊಸದಾಗಿ ಅರ್ಜಿ ಅಲ್ಲಿಸಬೇಕು ಎಂದು ಇತ್ತೀಚೆಗೆ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಘೋಷಿಸಿದ್ದರು. ಆದರೆ, ಇದೀಗ ಈ ನಿರ್ಧಾರವನ್ನು ಕೈಬಿಟ್ಟಿರುವ ಸರ್ಕಾರ, ಗ್ಯಾರಂಟಿ ಯೋಜನೆಗೆ ಮರು ಅರ್ಜಿ ಬದಲಿಗೆ ಮರುಪರಿಶೀಲನೆ ಮಾಡಲು ತೀರ್ಮಾನ ಮಾಡಿದೆ ಎಂದು ತಿಳಿದುಬಂದಿದೆ.

ಸಿಎಂ ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ಗ್ಯಾರಂಟಿಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಂಡಿದೆ.

ಈಗಿರುವ ಫಲಾನುಭವಿಗಳ ಮರು ಪರಿಶೀಲನೆ ನಡೆಸಲು ತೀರ್ಮಾನಿಸಲಾಗಿದ್ದು, ಮರು ಪರಿಶೀಲನೆ ಯಾರು ಮಾಡಬೇಕು, ಹೇಗೆ ಮಾಡಬೇಕು ಎಂಬುದನ್ನು ಮೂರು ದಿನದೊಳಗೆ ಅಂತಿಮಪಡಿಸಿ ತಿಳಿಸಲು ಸಿಎಂ ಸೂಚನೆ ನೀಡಿದ್ದಾರೆ.

ಸಭೆಯಲ್ಲಿ ಮಾತನಾಡಿರುವ ಸಿಎಂ, ಫಲಾನುಭವಿಗಳಿಗೆ ತೊಂದರೆ ಆಗಬಾರದು. ಅನರ್ಹ ಫಲಾನುಭವಿಗಳ ದುರುಪಯೋಗಕ್ಕೆ ಮಾತ್ರ ಬ್ರೇಕ್ ಹಾಕಬೇಕು. ಹಲವು ಫಲಾನುಭವಿಗಳು ಬ್ಯಾಂಕ್ ಸಾಲ ಪಡೆದಿರುತ್ತಾರೆ. ಸಾಲದ ಖಾತೆಗೆ ಗೃಹಲಕ್ಷ್ಮೀ ಹಣ ಹೋದ ತಕ್ಷಣ ಆ ಹಣ ಸಾಲದ ಮೊತ್ತಕ್ಕೆ ಜಮೆ ಆಗಿಬಿಡುತ್ತದೆ. ಆದ್ದರಿಂದ ಅಂತಹ ಫಲಾನುಭವಿಗಳು ಖಾತೆ ಬದಲಾಯಿಸಿರುತ್ತಾರೆ. ಇಂಥಾ ಫಲಾನುಭವಿಗಳಿಗೆ ತೊಂದರೆ ಆಗಬಾರದು ಎಂದು ತಿಳಿಸಿದ್ದಾರೆ.

ಗೃಹಜ್ಯೋತಿ ಗ್ಯಾರಂಟಿ ಯೋಜನೆ ಜಾರಿ ಆಗುವಾಗ ಹೆಚ್ಚಿನ ದುರುಪಯೋಗ ಆಗದ ಹಾಗೆ ಎಚ್ಚರಿಕೆ ವಹಿಸಿದ್ದರು. ಇದೇ ಎಚ್ಚರಿಕೆ ಇತರೆ ಯೋಜನೆಗಳಲ್ಲೂ ಅನುಸರಿಸಿದ್ದರೆ ದುರುಪಯೋಗದ ಪ್ರಮಾಣ ಕಡಿಮೆ ಆಗುತ್ತಿತ್ತು. ಮೃತಪಟ್ಟಿರುವ ಫಲಾನುಭವಿಗಳಿಗೂ ಗೃಹಲಕ್ಷ್ಮೀ ಹಣ ಹೋಗುತ್ತಿರುವುದು ಪತ್ತೆಯಾಗಿದೆ. ಈ ರೀತಿ ದುರುಪಯೋಗ ಆಗಬಾರದು. ಗೃಹಲಕ್ಷ್ಮೀ ಹಣ ಫಲಾನುಭವಿಗಳ ಖಾತೆಗೆ ಜಮೆಯಾದ ತಕ್ಷಣ ಅವರ ಮೊಬೈಲಿಗೆ ವಾಯ್ಸ್ ಮೆಸೇಜ್ ಮೂಲಕ ಖಚಿತಪಡಿಸಬೇಕು ಎಂದು ಸೂಚಿಸಿದ್ದಾರೆ.

Related Articles

Back to top button
error: Content is protected !!