ಜನಮನ

ಗೌರಿ ಗಣೇಶ ಹಬ್ಬದ ನಿಮಿತ್ತ ಬೆಂಗಳೂರಿನಿಂದ 1200 ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್‌ ಸೇವೆ

ಗೌರಿ ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರಿಂದ ರಾಜ್ಯದೊಳಗೆ ಮತ್ತು ಹೊರರಾಜ್ಯಗಳ ವಿವಿಧೆಡೆಗೆ ಕೆಎಸ್‌ಆರ್‌ಟಿಸಿಯಿಂದ ಹೆಚ್ಚುವರಿ ಬಸ್‌ ಸೇವೆ ಇರಲಿದೆ.

Views: 0

ಕನ್ನಡ ಕರಾವಳಿ ಸುದ್ಧಿ

ಗೌರಿ ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ 1200 ಹೆಚ್ಚುವರಿ ಬಸ್ಸುಗಳ ಸೇವೆ ಒದಗಿಸುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಘೋಷಿಸಿದೆ.

ವಾರಾಂತ್ಯದ ದಿನಗಳಾದ ಸೆಪ್ಟೆಂಬರ್ 15 (ಶುಕ್ರವಾರ) ಮತ್ತು ಸೆಪ್ಟೆಂಬರ್ 16 (ಶನಿವಾರ) ಮತ್ತು ಗಣೇಶ ಹಬ್ಬದ ಕಾರಣ ಸೆಪ್ಟೆಂಬರ್ 18ರಂದು ಬೆಂಗಳೂರಿನಿಂದ ಹೆಚ್ಚುವರಿಯಾಗಿ 1200 ಬಸ್‌ ಸೇವೆಯನ್ನು ಒದಗಿಸಲಾಗುತ್ತಿದೆ.

ಅದೇ ರೀತಿ ಸೆಪ್ಟೆಂಬರ್ 18ರಂದು ರಾಜ್ಯದ ವಿವಿಧೆಡೆಯಿಂದ ಮತ್ತು ಹೊರ ರಾಜ್ಯಗಳ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಹೆಚ್ಚುವರಿ ಬಸ್‌ ವ್ಯವಸ್ಥೆ ಮಾಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.

ಬೆಂಗಳೂರಿನಿಂದ ಯಾವೆಲ್ಲ ಊರಿಗೆ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್‌ ವ್ಯವಸ್ಥೆ

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಹೆಚ್ಚುವರಿಯಾಗಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ವಿಶೇಷ ಬಸ್ ಗಳು ತೆರಳುತ್ತವೆ.

ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆ ಬಸ್ ಗಳು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಹೊರಡಲಿವೆ.

ಕೆಎಸ್‌ಆರ್‌ಟಿಸಿ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡುವವರ ಗಮನಕ್ಕೆ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡುವವರು, ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್ ಅಪ್ ಪಾಯಿಂಟ್‌ ಹೆಸರನ್ನು ಗಮನಿಸಬೇಕು.

ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆ ಬಸ್ ಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಟಿಕೆಟ್‌ಗಳಲ್ಲೂ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.

ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು ಮತ್ತು ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ಮಾಹಿತಿ ನೀಡಿದ್ದಾರೆ.

4 ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರ ಸಮೂಹ ಟಿಕೆಟ್‌ಗೆ ಶೇಕಡ 10ರ ತನಕ ರಿಯಾಯಿತಿ

ಇ-ಟಿಕೆಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್‌ಸೈಟ್ ಮೂಲಕ ಮಾಡಬಹುದು. ಇದಲ್ಲದೆ, ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯ ಕೇಂದ್ರಗಳಲ್ಲಿರುವ ಇರುವ 691 ಗಣಕೀಕೃತ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದು.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ನಿಗಮವು ತಿಳಿಸಿದೆ.

ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ ಎಂದು ಕೆಎಸ್ಆರ್‌ಟಿಸಿ ತಿಳಿಸಿದೆ.

Related Articles

Back to top button
error: Content is protected !!