ರಾಜಕೀಯ

ಛತ್ತೀಸ್​ಗಢ, ಮಧ್ಯಪ್ರದೇಶದ ಸೋಲಿನಿಂದ ನಿರಾಸೆ,ಬಿಜೆಪಿ ವಿರುದ್ಧ ಲೋಕಸಭೆ ಚುನಾವಣೆಗೆ  ಸಿದ್ಧರಾಗಿ :ಖರ್ಗೆ

Views: 35

ತೆಲಂಗಾಣದಲ್ಲಿ ಕಾಂಗ್ರೆಸ್​ಗೆ ಅಧಿಕಾರ ನೀಡಿದ್ದಕ್ಕಾಗಿ ಅಲ್ಲಿನ ಜನತೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಧನ್ಯವಾದ ಅರ್ಪಿಸಿದ್ದಾರೆ. ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಪಕ್ಷದ ಸಾಧನೆ ನಿರಾಶಾದಾಯಕವಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ, ಈ ಸೋಲು ತಾತ್ಕಾಲಿಕ ಹಿನ್ನಡೆ ಎಂದು ಹೇಳಿರುವ ಅವರು, ಇವುಗಳನ್ನು ನಿವಾರಿಸಿ ಮತ್ತು ಬಿಜೆಪಿ ವಿರುದ್ಧ ಲೋಕಸಭೆ ಚುನಾವಣೆಗೆ ಸಂಪೂರ್ಣವಾಗಿ ಸಿದ್ಧರಾಗಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಮತ ಎಣಿಕೆಯ ಕೊನೆ ಹಂತದ ಟ್ರೆಂಡ್‌ಗಳ ಪ್ರಕಾರ, ತೆಲಂಗಾಣದಲ್ಲಿ ಕೆ ಚಂದ್ರಶೇಖರ ರಾವ್ ನೇತೃತ್ವದ ಬಿಆರ್‌ಎಸ್ ಸರ್ಕಾರವನ್ನು ಮಣಿಸಿ ಅಧಿಕಾರದ ಗದ್ದುಗೆ ಏರಲು ಕಾಂಗ್ರೆಸ್ ಸಜ್ಜಾಗಿದೆ. ಆದರೆ ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಮತ್ತು ಛತ್ತೀಸ್‌ಗಢದಲ್ಲಿ ಅದು ಅಧಿಕಾರವನ್ನು ಕಳೆದುಕೊಳ್ಳಲಿದೆ.

ಜನಾದೇಶಕ್ಕಾಗಿ ತೆಲಂಗಾಣ ಜನತೆಗೆ ನಾನು ಧನ್ಯವಾದ ಹೇಳುತ್ತೇನೆ. ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ನಮಗೆ ಮತ ನೀಡಿದ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ. ಈ ಮೂರು ರಾಜ್ಯಗಳಲ್ಲಿ ನಮ್ಮ ಸಾಧನೆ ನಿರಾಶಾದಾಯಕವಾಗಿದೆ. ಆದರೆ ದೃಢಸಂಕಲ್ಪದಿಂದ ನಾವು, ಈ ಮೂರು ರಾಜ್ಯಗಳಲ್ಲಿ ನಮ್ಮನ್ನು ನಾವು ಪುನರ್ನಿರ್ಮಿಸಲು ಮತ್ತು ಪುನರುಜ್ಜೀವನಗೊಳಿಸಲು ನಮ್ಮ ಬಲವಾದ ಸಂಕಲ್ಪವನ್ನು ಪುನರುಚ್ಚರಿಸುತ್ತೇವೆ ಎಂದು ಖರ್ಗೆ ಹೇಳಿದ್ದಾರೆ.

ಪಕ್ಷದ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ ಖರ್ಗೆ, ಕಾಂಗ್ರೆಸ್ ಪಕ್ಷವು ಈ ನಾಲ್ಕು ರಾಜ್ಯಗಳಲ್ಲಿ ಉತ್ತಮ ಅಭಿಯಾನವನ್ನು ನಡೆಸಿದೆ. ನಮ್ಮ ಲಕ್ಷಾಂತರ ಕಾರ್ಯಕರ್ತರ ಶ್ರಮವನ್ನು ನಾನು ಗುರುತಿಸುತ್ತೇನೆ ಮತ್ತು ಪ್ರಶಂಸಿಸುತ್ತೇನೆ ಎಂದು ಖರ್ಗೆ ಹೇಳಿದರು.

ಐದು ರಾಜ್ಯಗಳಿಗೆ ನಡೆದ ವಿಧಾನಸಭೆ ಚುನಾವಣೆಯ ಪೈಕಿ ನಾಲ್ಕರ ಫಲಿತಾಂಶ ಬಹುತೇಕ ಪ್ರಕಟಗೊಂಡಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಬಹುಮತ ಗಳಿಸಿದೆ. ರಾಜಸ್ಥಾನ, ಛತ್ತೀಸ್​ಗಢದಲ್ಲಿ ಮ್ಯಾಜಿಕ್ ಸಂಖ್ಯೆ ದಾಟಿರುವ ಬಿಜೆಪಿ ಮಧ್ಯಪ್ರದೇಶದಲ್ಲಿ ಅಧಿಕಾರ ಉಳಿಸಿಕೊಂಡಿದೆ. ತೆಲಂಗಾಣದಲ್ಲಿ ‘ಗ್ಯಾರಂಟಿ’ ಯೋಜನೆಗಳ ಮೂಲಕ ಅಬ್ಬರದ ಪ್ರಚಾರ ನಡೆಸಿದ್ದ ಕಾಂಗ್ರೆಸ್​ ಪಕ್ಷಕ್ಕೆ ಸರಳ ಬಹುಮತ ದೊರೆತಿದೆ.

Related Articles

Back to top button
error: Content is protected !!