ಶಿಕ್ಷಣ

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ “ಹದಿಹರೆಯದ ಸಮಸ್ಯೆ ಮತ್ತು ಸವಾಲುಗಳು” ಮಾಹಿತಿ ಕಾರ್ಯಾಗಾರ

Views: 5

ಕನ್ನಡ ಕರಾವಳಿ ಸುದ್ದಿ: ವಿದ್ಯಾರ್ಥಿಗಳಲ್ಲಿ ಹದಿಹರೆಯದ ವಯಸ್ಸಿನಲ್ಲಿ ಎದುರಾಗುವ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಬದಲಾವಣೆಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್, ಕಿರಿಮಂಜೇಶ್ವರದಲ್ಲಿ ಹದಿಹರೆಯದ ಸಮಸ್ಯೆ ಮತ್ತು ಸವಾಲುಗಳ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಬೈಂದೂರು ತಾಲ್ಲೂಕು ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕರಾದ ಶ್ರೀಮತಿ ವಸಂತಿ ಅವರು ವಿದ್ಯಾರ್ಥಿಗಳಿಗೆ ಹದಿಹರೆಯದ ಸಮಸ್ಯೆಗಳು ಮತ್ತು ಅವುಗಳನ್ನು ಸಮರ್ಥವಾಗಿ ಎದುರಿಸುವ ವಿಧಾನಗಳ ಕುರಿತು ಮಾಹಿತಿ ನೀಡಿದರು.

ಹದಿಹರೆಯವು ಜೀವನದ ಅತ್ಯಂತ ಸೂಕ್ಷ್ಮ ಹಾಗೂ ಮಹತ್ವದ ಹಂತವಾಗಿದ್ದು, ಈ ಅವಧಿಯಲ್ಲಿ ಉಂಟಾಗುವ ದೈಹಿಕ ಬದಲಾವಣೆಗಳು, ಮಾನಸಿಕ ಗೊಂದಲಗಳು, ಭಾವನಾತ್ಮಕ ಏರಿಳಿತಗಳು ಮತ್ತು ಆತ್ಮವಿಶ್ವಾಸದ ಕೊರತೆಯನ್ನು ಸಮತೋಲನದಿಂದ ನಿಭಾಯಿಸಬೇಕು. ಯಾವುದೇ ಸಮಸ್ಯೆಗಳಿದ್ದರೂ ಅವುಗಳನ್ನು ಮುಚ್ಚಿಡದೆ ಪೋಷಕರು, ಶಿಕ್ಷಕರು ಅಥವಾ ತಜ್ಞರೊಂದಿಗೆ ಮುಕ್ತವಾಗಿ ಚರ್ಚಿಸಬೇಕು ಎಂದು ತಿಳಿಸಿದರು.

ಏಡ್ಸ್‌ನಂತಹ ಮಾರಕ ರೋಗಗಳ ಕುರಿತು ಮಾಹಿತಿ ನೀಡಿದ ಅವರು, ಎಚ್‌ಐವಿ ಸೋಂಕು ಹರಡುವ ವಿಧಾನಗಳು, ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಸೋಂಕಿತರ ಬಗ್ಗೆ ತಾರತಮ್ಯವಿಲ್ಲದೆ ಮಾನವೀಯತೆಯಿಂದ ವರ್ತಿಸುವ ಅಗತ್ಯವನ್ನು ವಿವರಿಸಿದರು.

ಇಂದಿನ ಡಿಜಿಟಲ್ ಯುಗದಲ್ಲಿ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ವಿದ್ಯಾರ್ಥಿಗಳ ಏಕಾಗ್ರತೆ, ಮಾನಸಿಕ ಆರೋಗ್ಯ ಮತ್ತು ಶೈಕ್ಷಣಿಕ ಪ್ರಗತಿಯ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಎಚ್ಚರಿಸಿದರು. ಮೊಬೈಲ್ ಮತ್ತು ಇಂಟರ್‌ನೆಟ್‌ಗಳನ್ನು ಮಿತವಾಗಿ ಹಾಗೂ ಜವಾಬ್ದಾರಿಯುತವಾಗಿ ಬಳಸಬೇಕು. ಅಪರಿಚಿತರೊಂದಿಗೆ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳಬಾರದು ಎಂದರು.

ವ್ಯಕ್ತಿತ್ವ ವಿಕಸನದ ಕುರಿತು ಮಾತನಾಡಿದ ಅವರು, ಆತ್ಮವಿಶ್ವಾಸ, ಶಿಸ್ತು, ಸಮಯಪ್ರಜ್ಞೆ, ಸಕಾರಾತ್ಮಕ ಚಿಂತನೆ, ಉತ್ತಮ ಸಂವಹನ ಕೌಶಲ ಹಾಗೂ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು. ಜೀವನದಲ್ಲಿ ಎದುರಾಗುವ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ, ಉತ್ತಮ ಗುರಿಯೊಂದಿಗೆ ಮುನ್ನಡೆಯಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ದೀಪಿಕಾ ಆಚಾರ್ಯ ವಹಿಸಿದ್ದರು. ಶಾಲಾ ಸಂಯೋಜಕರಾದ ಸುಬ್ರಮಣ್ಯ ಮರಾಟಿ ಅವರು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರ್ವಹಿಸಿ, ವಂದಿಸಿದರು.

Related Articles

Back to top button
error: Content is protected !!