ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ; ಯುವತಿ ಸಾವು, ನಾಲ್ವರಿಗೆ ಗಂಭೀರ ಗಾಯ

Views: 382
ಕುಂದಾಪುರ :ಹೆದ್ದಾರಿ ತಿರುವಿನಲ್ಲಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಓರ್ವ ಯುವತಿ ಸ್ಥಳದಲ್ಲಿಯೇ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಎ. 27ರಂದು ಅಪರಾಹ್ನ ತಾಲೂಕಿನ ಹುಣ್ಸೆಮಕ್ಕಿ ಸಮೀಪ ಗುಡ್ಡೆಯಂಗಡಿಯಲ್ಲಿ ಸಂಭವಿಸಿದೆ.
ಗೋಕರ್ಣದ ಕಡೆಗೆ ಆರು ಮಂದಿ ಬೆಂಗಳೂರಿನಿಂದ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿಯಾದ ಪರಿಣಾಮ ಬೆಂಗಳೂರಿನ ಖಾಸಗಿ ಕಂಪೆನಿಯ ಉದ್ಯೋಗಿ ಕೀರ್ತಿ (25) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಬೆಂಗಳೂರು ಮೂಲದ ಸ್ನೇಹಿತರಾದ ವಿಘ್ನೇಶ್ (28), ಚೇತನ್ (28), ಐಶ್ವರ್ಯಾ (27), ಲತಾ (26) ಅವರಿಗೆ ಗಂಭೀರ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತದ ತೀವ್ರತೆಗೆ ಕಾರಿನ ಒಂದು ಬದಿ ಸಂಪೂರ್ಣ ಜಖಂಗೊಂಡಿತ್ತು. ಕಾರಿನ ಒಳಗೆ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮರವಂತೆ, ಮುರುಡೇಶ್ವರ, ಗೋಕರ್ಣದ ಕಡೆಗೆ ವೀಕೆಂಡ್ ರಜೆಯಲ್ಲಿ ಪ್ರವಾಸಕ್ಕೆ ತೆರಳುತ್ತಿದ್ಡ ಇವರು ಇನ್ನೋವಾ ಕಾರು ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯೇ ಈ ಅಪಘಾತಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ
ಬ್ರಹ್ಮಾವರ ವೃತ್ತ ನಿರೀಕ್ಷಕ ದಿವಾಕರ್ ಹಾಗೂ ಕೋಟ ಪೊಲೀಸ್ ಠಾಣಾಧಿಕಾರಿ ತೇಜಸ್ವಿ, ಸಿಬಂದಿ ಪ್ರಸನ್ನ, ಕೃಷ್ಣ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






