ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಮುಖ್ಯ ಶಿಕ್ಷಕ ಸಾವು
Views: 39
ಕನ್ನಡ ಕರಾವಳಿ ಸುದ್ದಿ: ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಕುಸಿದು ಬಿದ್ದು ಮೃತಪಟ್ಟ ದುರ್ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಕೇರಳಾಪುರ ಗ್ರಾಮದ ಸತೀಶ್ (53) ಎಂದು ಗುರುತಿಸಲಾಗಿದೆ. ಮೃತ ಶಿಕ್ಷಕ ಸತೀಶ್ ಕೆಬ್ಬೆಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ತರಗತಿಯಲ್ಲಿ ಪಾಠ ಮಾಡುತ್ತಿದ್ದ ವೇಳೆ ಸತೀಶ್ ಏಕಾಏಕಿ ಅಸ್ವಸ್ಥಗೊಂಡು ಕೊಠಡಿಯಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ವಿದ್ಯಾರ್ಥಿಗಳು ಹಾಗೂ ಸಹ ಶಿಕ್ಷಕರು ನೆರವಿಗೆ ಧಾವಿಸಿ ಅಂಬ್ಯುಲೆನ್ಸ್‌ಗೆ ಮಾಹಿತಿ ನೀಡಿದ್ದಾರೆ. ಆದಾಗ್ಯೂ, ತೀವ್ರ ಹೃದಯಾಘಾತದಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಶಿಕ್ಷಕರ ಅಕಾಲಿಕ ನಿಧನದಿಂದ ಶಾಲಾ ವಾತಾವರಣದಲ್ಲಿ ಶೋಕದ ಮೌನ ಆವರಿಸಿದೆ. ವಿದ್ಯಾರ್ಥಿಗಳು ಹಾಗೂ ಸಹ ಶಿಕ್ಷಕರು ಕಣ್ಣೀರಿಡುತ್ತಾ ತಮ್ಮ ಪ್ರಿಯ ಗುರುವನ್ನು ಸ್ಮರಿಸಿದ್ದಾರೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಘಟನೆ ಕುರಿತು ಮಾಹಿತಿ ಸಂಗ್ರಹಿಸಿ, ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದಾರೆ.






