ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹಿಂಪಡೆಯುವಂತೆ ಒತ್ತಾಯಿಸಿ ಜೂನ್ 17 ರಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ

Views: 30
ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ರಾಜ್ಯ ಬಿಜೆಪಿ ಜೂನ್ 17 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮೊದಲನೆಯದಾಗಿ, ರಾಜ್ಯದ ಆರ್ಥಿಕ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಗ್ಯಾರಂಟಿಗಳ ಕಾರಣದಿಂದಾಗಿ ಅವರು ಸರ್ಕಾರವನ್ನು ನಡೆಸಲು ಸಾಧ್ಯವಾಗುತ್ತಿಲ್ಲ. ಸಂಪನ್ಮೂಲಗಳನ್ನು ಕ್ರೋಢೀಕರಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದರು.
ರಾಜ್ಯ ಸರ್ಕಾರ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 3 ರೂ. ಮತ್ತು ಡೀಸೆಲ್ ಬೆಲೆಯನ್ನು ರೂ. 3.50 ರಷ್ಟು ಹೆಚ್ಚಿಸಲು ನಿರ್ಧಾರ ಕೈಗೊಂಡಿದೆ. ಇದನ್ನು ಹಿಂಪಡೆಯಬೇಕು ಎಂಬುದು ಬಿಜೆಪಿಯ ಒತ್ತಾಯವಾಗಿದೆ. ಈ ನಿರ್ಧಾರದ ಬಗ್ಗೆ ಪಕ್ಷ ಸುಮ್ಮನಿರುವುದಿಲ್ಲ. ಸೋಮವಾರ ನಾವು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಿದ್ದೇವೆ ಮತ್ತು ಬೆಲೆ ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ತಿಳಿಸಿದರು.
ವಿದ್ಯುತ್ ದರ ಕೂಡಾ ಹೆಚ್ಚಳ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲು ಸಾಧ್ಯವಾಗದ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದೆ. ಈ ಮೂಲಕ ರಾಜ್ಯ ಜನತೆಯನ್ನು ಶಿಕ್ಷಿಸುತ್ತಿದೆ. ಒಂದು ಕಡೆ ಲೋಕಸಭಾ ಚುನಾವಣೆಯ ಸೋಲಿನ ಹತಾಶೆ ಮತ್ತೊಂದೆಡೆ ರಾಜ್ಯದ ಆರ್ಥಿಕತೆ ನಾಶವಾಗಿದೆ ಎಂದು ವಿಜಯೇಂದ್ರ ಆರೋಪಿಸಿದರು.






