ಪ್ರೀತಿಸುವಂತೆ ಒತ್ತಾಯಿಸಿ ಯುವಕನಿಂದ ಕಿರುಕುಳ : ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ
Views: 60
ಕನ್ನಡ ಕರಾವಳಿ ಸುದ್ದಿ: ಪ್ರೀತಿ ಹೆಸರಲ್ಲಿ ಯುವಕನೊಬ್ಬ ಕಿರುಕುಳ ನೀಡುತ್ತಿದ್ದಾನೆಂಬ ಆರೋಪ ಕೇಳಿಬಂದಿದ್ದು, ಇದರಿಂದ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ.
ಮೃತ ಯುವತಿಯನ್ನು ವರ್ಷಾ (22) ಎಂದು ಗುರುತಿಸಲಾಗಿದೆ. ವರ್ಷಾ ಮೈಸೂರಿನಲ್ಲಿ ಬಿ.ಇ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.
ಕೆಲ ದಿನಗಳಿಂದ ಯುವಕನೊಬ್ಬ ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದ್ದು, ಇದರಿಂದ ಮಾನಸಿಕವಾಗಿ ನೊಂದಿದ್ದ ವರ್ಷಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮೃತ ಯುವತಿಯ ತಾಯಿ ನಾಗರತ್ನಮ್ಮ ಅವರು ಯಳಂದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಗೆ ಸಂಬಂಧಿಸಿದ ಆರೋಪಗಳ ಕುರಿತು ತನಿಖೆ ನಡೆಸುತ್ತಿದ್ದಾರೆ.
ಯುವತಿಯ ಆತ್ಮಹತ್ಯೆಗೆ ನಿಖರ ಕಾರಣ ಹಾಗೂ ಕಿರುಕುಳದ ಆರೋಪಗಳ ಕುರಿತು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.






