ಬಂಗಾಳಕೊಲ್ಲಿಯಲ್ಲಿ ಚಂಡಮಾರುತ: ಭಾರೀ ಮಳೆ ಮುನ್ಸೂಚನೆ

Views: 167
ಕನ್ನಡ ಕರಾವಳಿ ಸುದ್ದಿ: ವಿವಿಧ ಭಾಗದಲ್ಲಿ ನೈರುತ್ಯ ಮಾನ್ಸೂನ್ ಅಂತ್ಯವಾಗುತ್ತಿದೆ. ಆದರೆ ಕರ್ನಾಟಕ, ಕೇರಳ ಹಾಗೂ ಮಹಾರಾಷ್ಟ್ರದ ವಿವಿಧ ಭಾಗದಲ್ಲಿ ಭಾರೀ ಮಳೆ ಆಗುತ್ತಿದೆ. ಅಕ್ಟೋಬರ್ 5ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜನ ಎಚ್ಚರದಿಂದ ಇರುವಂತೆ ಸೂಚನೆ ನೀಡಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಾವಣಗೆರೆ, ತುಮಕೂರು, ಧಾರವಾಡ, ರಾಯಚೂರು, ಬಳ್ಳಾರಿ, ಕೊಡಗು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಬಂಗಾಳಕೊಲ್ಲಿಯಲ್ಲಿ ಏಕಕಾಲಕ್ಕೆ ಎರಡು ಚಂಡಮಾರುತ ರೂಪುಗೊಂಡಿರುವ ಪ್ರಭಾವದಿಂದಾಗಿ ಒಡಿಶಾ – ಪಶ್ಚಿಮ ಬಂಗಾಳ ಹಾಗೂ ಆಂಧ್ರಪ್ರದೇಶದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಇದರ ಪ್ರಭಾವ ಕರ್ನಾಟಕದ ಮೇಲೂ ಆಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಇನ್ನೂ ಒಂದು ವಾರದ ಅವಧಿಗೆ ದೇಶಾದ್ಯಂತ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ರಾಜ್ಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ ವಾಡಿಕೆಯಂತೆ ಪ್ರತೀ ವರ್ಷ ಜುಲೈ 1ರಿಂದ ಸೆಪ್ಟೆಂಬರ್ 30ರವರೆಗೂ ನೈರುತ್ಯ ಮಾನ್ಸೂನ್ ಮಾರುತಗಳಿಂದ ಮಳೆಯಾಗುತ್ತದೆ. ಆದರೆ ಈ ಬಾರಿ ಅಕ್ಟೋಬರ್ 15ರವರೆಗೆ ಮುಂದುವರಿಯಲಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.
ಗಾಳಿಯ ದಿಕ್ಕಿನ ಮೇರೆಗೆ ಕೆಲವು ಬಾರಿ ನೈರುತ್ಯ ಮತ್ತು ಈಶಾನ್ಯ ಮಾನ್ಸೂನ್‌ನಲ್ಲಿ ವ್ಯತ್ಯಾಸವಾಗುತ್ತದೆ. ಈ ವರ್ಷ ನೈರುತ್ಯ ಮಾರುತಗಳು ಅಕ್ಟೋಬರ್ 15ರವರೆಗೆ ಮುಂದುವರಿಯಲಿವೆ. ನಂತರ ಈಶಾನ್ಯ ಮಾರುತಗಳು ರಾಜ್ಯ ಪ್ರವೇಶಿಸಲಿವೆ ಎಂದು ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.