ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮತ್ತೆ ಚಂಡಮಾರುತ ಸಾಧ್ಯತೆ!
Views: 66
ಕನ್ನಡ ಕರಾವಳಿ ಸುದ್ದಿ: ಅರ್ನಬ್ ಚಂಡಮಾರುತದಿಂದಾಗಿ ಆಂಧ್ರಪ್ರದೇಶ ಹಾನಿ ಅನುಭವಿಸಿದೆ.ಅರ್ನಬ್ ಚಂಡಮಾರುತದಿಂದಲೇ ಇನ್ನೂ ಚೇತರಿಸಿಕೊಳ್ಳುತ್ತಿರುವ ಒಡಿಶಾ, ಆಂಧ್ರಪ್ರದೇಶಕ್ಕೆ ಮತ್ತೊಂದು ಚಂಡಮಾರುತ ಅಪ್ಪಳಿ ಸಲಿದೆ.
ಬಂಗಾಳ ಕೊಲ್ಲಿಯಲ್ಲಿ ರವಿವಾರ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದ ‘ಮುರಸು’ ಚಂಡಮಾರುತ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಪೂರ್ವ ಕರಾವಳಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ಈ ಚಂಡಮಾರುತದಿಂದ ದೇಶದ ಹಲವು ರಾಜ್ಯಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲೂ ಮುಂದಿನ ಕೆಲವು ದಿನ ಮಳೆಯಾಗಲಿದೆ ಎಂದು ಹೇಳಲಾಗಿದೆ.
ನವೆಂಬರ್ 3 ರಂದು ದಕ್ಷಿಣ ಆಂಧ್ರಪ್ರದೇಶದ ಕರಾವಳಿಯನ್ನು ಚಂಡಮಾರುತ ದಾಟುವ ಸಾಧ್ಯತೆಯಿದೆ. ಗಂಟೆಗೆ 100 ರಿಂದ 110 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಗಾಳಿಯ ವೇಗ ಕೆಲವೊಮ್ಮೆ ಗಂಟೆಗೆ 120 ಕಿ.ಮೀ ತಲುಪುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂನಲ್ಲಿ ನವೆಂಬರ್ 1 ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 2 ರಂದು ಕೆಲವೆಡೆ ಭಾರಿ ಗಾಳಿ ಮಳೆಯಾಗಲಿದೆ ಎಂದು ಹೇಳಿದೆ.
ಅತ್ತ ತಮಿಳುನಾಡಿನಲ್ಲಿ, ಕೇರಳದಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ, ಕರ್ನಾಟಕದಲ್ಲೂ ಮಳೆಯಾಗಲಿದೆ ಎಂದು ತಿಳಿಸಿದೆ.
ಕರ್ನಾಟಕದ ಹಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಮುಂದಿನ ಕೆಲವು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ರಾಜ್ಯದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಲಿದೆ ಎಂದು ಹೇಳಿದೆ.
ನವೆಂಬರ್ 5 ರ ವರೆಗೆ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಲಿದೆ. ಅಲ್ಲದೆ, ಕೆಲವೆಡೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.






