ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಸಾಧ್ಯತೆ
Views: 12
ಕನ್ನಡ ಕರಾವಳಿ ಸುದ್ದಿ: ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಇದೇ ವೇಳೆ ರಾಜಧಾನಿ ಬೆಂಗಳೂರಿನಲ್ಲೂ ಮಳೆಯಾಗುವ ನಿರೀಕ್ಷೆಯಿದೆ.
ಮಂಗಳವಾರ ಸಂಜೆ 5.30ರವರೆಗಿನ ಹವಾಮಾನ ಇಲಾಖೆಯ ಅಂಕಿ ಅಂಶಗಳ ಪ್ರಕಾರ, ಬೆಂಗಳೂರು ನಗರದಲ್ಲಿ 4.1 ಮಿ.ಮೀ ಮಳೆಯಾಗಿದೆ. ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ 15.8 ಮಿ.ಮೀ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.6 ಮಿ.ಮೀ ಮಳೆ ದಾಖಲಾಗಿದೆ
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ನೈಋತ್ಯ ಬಂಗಾಳ ಕೊಲ್ಲಿಯಿಂದ ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿಯವರೆಗೆ ಸಮುದ್ರ ಮಟ್ಟದಿಂದ 0.96 ಕಿ.ಮೀ ಎತ್ತರದಲ್ಲಿ ಪೂರ್ವ ಮಾರುತಗಳಲ್ಲೊಂದು ತಗ್ಗು ಪ್ರದೇಶ ನಿರ್ಮಾಣವಾಗಿದೆ. ಇದರೊಂದಿಗೆ ಉತ್ತರ ಮಹಾರಾಷ್ಟ್ರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ದಕ್ಷಿಣ ಕೇರಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲೂ ಮೇಲ್ಮೈ ಸುಳಿಗಾಳಿ ಸಕ್ರಿಯವಾಗಿದೆ.
ಇದಲ್ಲದೆ, ಕನ್ಯಾಕುಮಾರಿಯಿಂದ ರಾಯಲಸೀಮಾದವರೆಗೆ ಹಾಗೂ ಉತ್ತರ ಕೇರಳ-ಕರ್ನಾಟಕ ಕರಾವಳಿಯುದ್ದಕ್ಕೂ ಪೂರ್ವ ಮಾರುತಗಳ ಪ್ರಭಾವದಿಂದ ತಗ್ಗು ಪ್ರದೇಶಗಳು ನಿರ್ಮಾಣವಾಗಿವೆ.
ಈ ಹವಾಮಾನ ವ್ಯವಸ್ಥೆಗಳ ಪ್ರಭಾವದಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿಯೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ






