ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ: ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ

Views: 196
ಕನ್ನಡ ಕರಾವಳಿ ಸುದ್ದಿ: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಇನ್ನೊಂದು ವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಏಪ್ರಿಲ್ 17ರವರೆಗೆ ಸಾಧಾರಣ ಮಳೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಗಳಿವೆ ಎಂದು ಮುನ್ನೆಚ್ಚರಿಕೆ ನೀಡಿದೆ.
ಏಪ್ರಿಲ್ 12ರಿಂದ ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಇಲ್ಲವೇ ಹಗುರದಿಂದ ಕೂಡಿದ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಏ.12ರಂದು ಸಾಧಾರಣ ಮಳೆಯಾಗಲಿದ್ದರೆ, 13 ಹಾಗೂ 14ರಂದು ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. 15ಮತ್ತು 16ರಂದು ಕೆಲವು ಭಾಗದಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.
ದಕ್ಷಿಣ ಒಳನಾಡಿನಲ್ಲಿ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗುತ್ತಿದೆ. ಉಳಿದ ಭಾಗದಲ್ಲಿ ಒಣಹವೆ ಮುಂದುವರಿಯುವ ಜೊತೆಗೆ ಬಿಸಿಲ ತಾಪ ಮುಂದುವರಿದಿದೆ. ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಲ್ಲಿ ಶನಿವಾರದಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.