ರಾಜಕೀಯ

ಬಿ.ವೈ.ರಾಘವೇಂದ್ರ ಸೇರಿದಂತೆ ಘಟಾನುಘಟಿಗಳಿಂದ ನಾಮಪತ್ರ ಸಲ್ಲಿಕೆ

Views: 46

ಬೆಂಗಳೂರು, ಮೇ 7ರಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಡೆಯಲಿರುವ ೨ನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಒಂದು ದಿನ ಬಾಕಿ ಇರುವಾಗಲೇ ಇಂದು ನಾಮಪತ್ರ ಸಲ್ಲಿಕೆ ಭರಾಟೆ ಬಿರುಸಾಗಿದೆ.ರಾಜ್ಯದ ಚಿಕ್ಕೋಡಿ , ಬೆಳಗಾವಿ, ಬಾಗಲಕೋಟೆ, ವಿಜಯಪುರ ಕಲಬುರಗಿ ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ ಹಾಗೂ ಶಿವಮೊಗ್ಗ ಕ್ಷೇತ್ರಗಳಲ್ಲಿ ಮೇ 7 ರಂದು ಚುನಾವಣೆ ನಡೆಯಲಿದ್ದು, ಈ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕಡೆಯ ದಿನವಾಗಿದ್ದು, ನಾಮಪತ್ರ ಸಲ್ಲಿಕೆಗೆ ಒಂದು ದಿನ ಬಾಕಿ ಇರುವಾಗಲೇ ಹಲವು ಘಟಾನುಘಟಿ ನಾಯಕರುಗಳು ಸೇರಿದಂತೆ ಹಲವರು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.

ಶಿವಮೊಗ್ಗ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ. ರಾಘವೇಂದ್ರ ರವರು ಇಂದು ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ಬಿಜೆಪಿ ಕಾರ್ಯಕರ್ತರ ಜತೆ ಮೆರವಣಿಗೆಯಲ್ಲಿ ಆಗಮಿಸಿ ಉಮೇದುವಾರಿಕೆ ಸಲ್ಲಿಸಿದ ಬಿ.ವೈ. ರಾಘವೇಂದ್ರ ಅವರಿಗೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ ಸಾಥ್ ನೀಡಿದರು.ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ರಾಘವೇಂದ್ರ ಅವರ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಉಪಸ್ಥಿತರಿದ್ದರು. ಶಿವಮೊಗ್ಗದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲೂ ಈ ಇಬ್ಬರೂ ನಾಯಕರು ಭಾಗಿಯಾಗಿದ್ದರು.

ಗದ್ದಿಗೌಡರ್-ಜಾದವ್ ನಾಮಪತ್ರ

ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಪಿ.ಸಿ. ಗದ್ದಿಗೌಡರ್ ಸಹ ಇಂದು ತಮ್ಮ ನಾಮಪತ್ರ ಸಲ್ಲಿಸಿದರು.

ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಮೆರವಣಿಗೆಯಲ್ಲಿ ಬಂದು ಗದ್ದಿಗೌಡರ್ ಅವರು ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು.

ಕಲಬುರುಗಿ ಕ್ಷೇತ್ರದ ಅಭ್ಯರ್ಥಿ, ಹಾಲಿ ಸಂಸದ ಉಮೇಶ್ ಜಾದವ್ ಸಹ ಇಂದು ತಮ್ಮ ನಾಮಪತ್ರ ಸಲ್ಲಿಸಿದರು.

ಇಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುಖರ್ಗೆ ಅವರ ಅಳಿಯ ರಾಧಾಕೃಷ್ಣ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಅವರು ಈಗಾಗಲೇ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಕುಮಾರ್‌ನಾಯಕ್-ಬಿ.ವಿ. ನಾಯಕ್ ನಾಮಪತ್ರ

ರಾಯಚೂರು ಎಸ್‌ಟಿ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ನಿವೃತ್ತ ಐಎಎಸ್ ಅಧಿಕಾರಿ ಕುಮಾರನಾಯಕ್ ಇಂದು ತಮ್ಮ ನಾಮಪತ್ರ ಸಲ್ಲಿಸಿದರು.

ಇದೇ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿ.ವಿ. ನಾಯಕ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

೨ನೇ ಹಂತದ ಚುನಾವಣೆಗೆ ಏ. 12 ರಂದೇ ಅಧಿಸೂಚನೆ ಹೊರಬಿದ್ದಿದ್ದು ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆದಿದ್ದು, ಈಗಾಗಲೇ ಈ ಕ್ಷೇತ್ರಗಳ ಹಲವರು ತಮ್ಮ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.ಈ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ನಾಳೆ ಕಡೆಯ ದಿನವಾಗಿದ್ದು, ನಾಮಪತ್ರಗಳ ಪರಿಶೀಲನೆ ಏ. 20 ರಂದು ನಡೆಯಲಿದೆ. ನಾಮಪತ್ರ ವಾಪಸ್ಸಾತಿಗೆ ಏ. 22 ರಂದು ಕಡೆಯ ದಿನ.

Related Articles

Back to top button
error: Content is protected !!