ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರು ಸಾವು
Views: 77
ಕನ್ನಡ ಕರಾವಳಿ ಸುದ್ದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಇಂದು ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೇರಳದಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಖಾಸಗಿ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಪ್ರಾಣಕಳೆದುಕೊಂಡಿದ್ದಾರೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಪುಟ್ಟಪ್ಪನದೊಡ್ಡಿ ಬಳಿ ಇಂದು ಬೆಳ್ಳಂಬೆಳಿಗ್ಗೆ ಈ ದುರ್ಘಟನೆ ನಡೆದಿದೆ. ಕೇರಳ ಮೂಲದ ‘PK ಟ್ರಾವೆಲ್ಸ್’ಗೆ ಸೇರಿದ ಬಸ್ ಇದಾಗಿದ್ದು, ಚಾಲಕನ ನಿದ್ದೆ ಮಂಪರು ಅಪಘಾತಕ್ಕೆ ಕಾರಣ ಎನ್ನಲಾಗಿದೆ. ವೇಗವಾಗಿ ಚಲಿಸುತ್ತಿದ್ದ ಬಸ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ (Divider) ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೃತಪಟ್ಟ ನಾಲ್ವರನ್ನು ಗುರುತಿಸಲಾಗಿದ್ದು, ಇವರಲ್ಲಿ ಇಬ್ಬರು ಕೇರಳ ಮೂಲದವರಾದರೆ, ಉಳಿದಿಬ್ಬರು ಬೆಂಗಳೂರಿನವರು ಎಂದು ತಿಳಿದುಬಂದಿದೆ.
ಕೇರಳದ ಮಹಮ್ಮದ್ ಪರಾನ್ (22), ರಫೀಜ್ (45) ಹಾಗೂ ಬೆಂಗಳೂರಿನ ರಶೀದ್ (45), ಸಕೀರ್ (27) ಮೃತ ದುರ್ದೈವಿಗಳು. ಅಪಘಾತದಲ್ಲಿ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಅಬ್ದುಲ್ ಹಾಗೂ ಅಲೇಸ್ ಎಂಬುವವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.






