ಭಾರಿ ಮಳೆ: ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ, 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
Views: 108
ಕನ್ನಡ ಕರಾವಳಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ಜುಲೈ 8 (ಬುಧವಾರ) ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದೇ ವೇಳೆ ರಾಜ್ಯದ 7 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಜಾರಿಯಲ್ಲಿದೆ. ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿದೆ.
ಕೊಡಗು ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆ ಮತ್ತು ಬಿರುಗಾಳಿಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಬುಧವಾರ ಒಂದು ದಿನ ರಜೆ ಘೋಷಿಸಲಾಗಿದೆ. ಶಾಲಾ ಶಿಕ್ಷಣ ಇಲಾಖೆ ಈ ಆದೇಶ ಹೊರಡಿಸಿದೆ.
ವಿರಾಜಪೇಟೆ ತಾಲೂಕಿನಾದ್ಯಂತ ಮಳೆಯ ಅಬ್ಬರ ಮುಂದುವರಿದಿದ್ದು, ಬೇತ್ರಿ ಬಳಿ ಕಾವೇರಿ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಕೆರೆ-ಕಟ್ಟೆಗಳು ತುಂಬಿ ಹರಿಯುತ್ತಿದ್ದು, ಭತ್ತದ ಗದ್ದೆಗಳು ಜಲಾವೃತಗೊಂಡಿವೆ.
ದಕ್ಷಿಣ ಕನ್ನಡದಲ್ಲಿ ಪಿಯುಸಿ ವರೆಗೆ ರಜೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಬುಧವಾರ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು, ವಸತಿ ಶಾಲೆಗಳು, ಪದವಿ ಪೂರ್ವ ಹಾಗೂ ವಸತಿ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಯಾವುದೇ ತರಗತಿಗಳನ್ನು ನಡೆಸದಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗದ ಸಾಗರ ತಾಲೂಕಿನಲ್ಲಿ ಶಾಲೆ-ಕಾಲೇಜುಗಳಿಗೆ ರಜೆ
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿಯೂ ಮಳೆಯ ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ಬುಧವಾರ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಈ ರಜೆಯನ್ನು ವಾರಾಂತ್ಯದಲ್ಲಿ ತರಗತಿಗಳನ್ನು ನಡೆಸುವ ಮೂಲಕ ಸರಿದೂಗಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಬೆಳಗಾವಿ ಜಿಲ್ಲೆಯ 3 ತಾಲೂಕುಗಳಲ್ಲಿ ರಜೆ
ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯ ಹಿನ್ನೆಲೆ ಬೆಳಗಾವಿ, ನಿಪ್ಪಾಣಿ ಹಾಗೂ ಖಾನಾಪುರ ತಾಲೂಕುಗಳ ಶಾಲೆಗಳಿಗೆ ಬುಧವಾರ ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಚಿಕ್ಕಮಗಳೂರಿನ ಹಲವು ತಾಲೂಕುಗಳಲ್ಲಿ ರಜೆ
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಭಾರೀ ಗಾಳಿ ಮತ್ತು ಮಳೆಯ ಹಿನ್ನೆಲೆಯಲ್ಲಿ ಕೊಪ್ಪ, ಶೃಂಗೇರಿ, ಮೂಡಿಗೆರೆ, ಕಳಸ, ಎನ್.ಆರ್.ಪುರ ಹಾಗೂ ಚಿಕ್ಕಮಗಳೂರು ತಾಲೂಕಿನ ಆಯ್ದ ಭಾಗಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.






